ರೋಣ ಫೆಬ್ರವರಿ 05: ಲಾರಿ ಹಾಗೂ ಕ್ರೂಸರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ, ಹದಿನೈದಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಮೃತರನ್ನು ಗಜೇಂದ್ರಗಡ ಪಟ್ಟಣದ ಶಿವಾಜಿ ಪೇಟೆಯ ಮರಿಯಂಬು ದಾದೇಸಾಬ್ ಹುನಗುಂದ (55), ಅನ್ನಪೂರ್ಣ ಲಕ್ಷ್ಮಣ ಚಂಗಳಿ (45) , ಸುಜಾತಾ ರಾಜಪ್ಪ ಹೊಸಮನಿ (30) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೃಷಿ ಕೂಲಿ ಕಾರ್ಮಿಕರಾಗಿದ್ದು, ಗಜೇಂದ್ರ ಗಡದಿಂದ ರೋಣ ಪಟ್ಟಣದ ಕಡೆ ತೆರಳುವಾಗ ಅಪಘಾತ ಸಂಭವಿಸಿದೆ.
ವಾಹನದಲ್ಲಿ ಉಳಿದವರಿಗೂ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರೋಣ ಪಟ್ಟಣದ ಸರಕಾರಿ ಆಸ್ಪತ್ರೆ ಹಾಗೂ ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ, ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ರೋಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ಕೈಗೊಂಡಿದ್ದಾರೆ.