LATEST NEWS
ಗುಲಾಬ್ ಚಂಡಮಾರುತ ಪ್ರಭಾವ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ….!!

ಮಂಗಳೂರು ಸೆಪ್ಟೆಂಬರ್ 27: ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಗುಲಾಬ್ ಚಂಡ ಮಾರುತದಿಂದಾಗಿ ಕರಾವಳಿಯ ಭಾಗದಲ್ಲಿ ಮಳೆ ಪ್ರಾರಂಭವಾಗಿದೆ. ಇಂದು ಬೆಳಿಗ್ಗೆಯಿಂದ ಪ್ರಾರಂಭವಾದ ಮಳೆ ಮುಂದುವರೆದಿದ್ದು, ಅಕ್ಟೋಬರ್ 1 ರವರೆಗೆ ಕರಾವಳಿಯ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈಗಾಗಲೇ ಬಂಗಾಳ ಕೊಲ್ಲಿಗೆ ಗುಲಾಬ್ ಚಂಡ ಮಾರುತ ಅಪ್ಪಳಿಸಿದ್ದು, ವಿವಿಧ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 1ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಗುಲಾಬ್ ಚಂಡಮಾರುತದ ವೇಗ ಗಂಟೆಗೆ 70-80 ಕಿ.ಮೀ. ಇರಲಿದೆ. ಚಂಡಮಾರುತ ಹಾದುಹೋಗಲಿರುವ ಕಾಳಿಂಗಪಟ್ಟಣಂ, ವಿಶಾಖಪಟ್ಟಣಂ ಮತ್ತು ಗೋಪಾಲಪುರಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.