ಹಾಸನ, ಮಾರ್ಚ್ 24: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕುಂದಾಪುರ ಮೂಲದ ಪ್ರಯಾಣಿಕ ಸಾವನಪ್ಪಿದ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಸಮೀಪದ ಅಮ್ಮಕುಟೀರ ಬಡಾವಣೆಯ ಬಳಿ ಮಂಗಳವಾರ ಮುಂಜಾನೆ 4.30ರ ಸಂಭವಿಸಿದೆ.

ಮೃತರನ್ನು ಕುಂದಾಪುರ ಮೂಲದ ಕೃಷ್ಣಶೆಟ್ಟಿ (42) ಸ್ಥಳದಲ್ಲೇ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರಿನತ್ತ ತೆರಳುತ್ತಿದ್ದ ದುರ್ಗಾಂಬ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಾಗುತ್ತಿದ್ದ ವೇಳೆ, ಮತ್ತೊಂದು ವಾಹನವನ್ನು ಹಿಂದಿಕ್ಕುವ ಪ್ರಯತ್ನದಲ್ಲಿ ಮುಂದೆ ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಬಸ್ ಮುಂಭಾಗ ಸಂಪೂರ್ಣ ಹಾನಿಗೊಳಗಾಗಿದೆ. ಅಪಘಾತದ ಪರಿಣಾಮ ಬಸ್ನಲ್ಲಿದ್ದ ಕುಂದಾಪುರ ಮೂಲದ ಕೃಷ್ಣ ಶೆಟ್ಟಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.