LATEST NEWS
ರಾಜ್ಯದಲ್ಲಿ ಇನ್ನೂ ಒಂದು ವಾರ ಬೇಸಿಗೆ ಮಳೆ ಅಬ್ಬರ

ಬೆಂಗಳೂರು ಎಪ್ರಿಲ್ 26: ರಾಜ್ಯದಲ್ಲಿ ಮುಂದಿನ ಒಂದು ವಾರ ಗುಡುಗು ಸಿಡಿಲು ಸಹಿತ ಬೇಸಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಸಂಭವವಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ ಹಾಗೂ ಗದಗ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 50ರಿಂದ 60 ಕಿ.ಮೀ. ವೇಗ) ಮಳೆಯಾಗುವ ಸಾಧ್ಯತೆಯಿದೆ. ಇಲ್ಲಿ ಆಲಿಕಲ್ಲು ಬೀಳುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 40ರಿಂದ 50 ಕಿ.ಮೀ. ವೇಗ) ಸಾಧಾರಣ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳ ಕೆಲವೆಡೆ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆಯಿದ್ದು, ಇದೇ 30ರಂದು 26 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.