ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಅಪಾರ ಆಸ್ತಿಪಾಸ್ತಿ ನಷ್ಟವಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ನಾಳೆ (ಜುಲೈ5 ) ರಿಂದ ಮತ್ತೆ ನಾಲ್ಕು ದಿನ ಭಾರಿಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಜೊತೆಗೆ ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 5, 6 , 7 ಮತ್ತು 8ರಂದು 4 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದರೆ, 9ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಭಾಗದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಜುಲೈ 6, 7ರಂದು ಆರೆಂಜ್ ಅಲರ್ಟ್ ಮತ್ತು 5 ಮತ್ತು 9ಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಐದೂ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿಯಿಂದ ಕೂಡಿದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಕೊಡಗು ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಪ್ರಮುಖ ಘಾಟ್ ಪ್ರದೇಶಗಳು ಸೇರಿದಂತೆ ಅನೇಕ ಕಡೆ ಭೂಕುಸಿತಗಳು ಉಂಟಾಗಿದೆ, ಹೆದ್ದಾರಿಗಳಲ್ಲಿ ಭಾರಿ ಮಳೆ ಕಾರಣ ಹೊಂಡ ಗುಂಡಿಗಳು ಸೃಷ್ಟಿಯಾಗಿದ್ದು ಕುಟುಂಬ ಸದಸ್ಯರುಗಳು ಒಳಗೊಂಡಂತೆ ಅನಗತ್ಯ ದೂರ ಪ್ರಯಾಣಗಳನ್ನು ಸದ್ಯದ ಮಟ್ಟಿಗೆ ಮುಂದೂಡಿ ಎಂಬ ಸಲಹೆಗಳನ್ನ ತಜ್ಞರು ನೀಡಿದ್ದಾರೆ.