Connect with us

LATEST NEWS

ದಕ್ಷಿಣಕನ್ನಡ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಎಚ್ಚರಿಕೆ – ಮೇ 20 ಮತ್ತು 21 ರೆಡ್ ಅಲರ್ಟ್

ಮಂಗಳೂರು ಮೇ 19: ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಮೇ 20 ಮತ್ತು ಮೇ 21 ರಂದು ಭಾರಿ ಗಾಳಿ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.


ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳಾದ್ಯಂತ ಆಗಾಗ ಭಾರೀ ಮಳೆ ಆಗುತ್ತಿದೆ. ಗುಡುಗು ಸಹಿತ ಅತ್ಯಧಿಕ ಮಳೆ ಆರ್ಭಟ ಇಂದಿನಿಂದ ಮುಂದಿನ 05 ದಿನಗಳವರೆಗೆ (ಮೇ 23) ಕಂಡು ಬರಲಿದೆ. ಇದರಲ್ಲಿ ಮುಂದಿನ ಎರಡು ದಿನ ಬಿರುಗಾಳಿ ಸಹಿತ ಮಳೆ ಆಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ದಕ್ಷಿಣಕನ್ನಡ ಮತ್ತು ಉತ್ತರಕನ್ನಡ ಜಿಲ್ಲೆಗಳಿಗೆ ಮೇ 20 ಮತ್ತು 21 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಗುಡಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸಮುದ್ರ ತೀರದಲ್ಲಿ ಭಾರಿ ಗಾಳಿ ಬೀಸುವ ಸಾಧ್ಯತೆ ಇದ್ದು ಎಚ್ಚರಿಕೆಯಿಂದ ಇರಲು ಹವಮಾನ ಇಲಾಖೆ ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ( ಮೇ 20 ರಿಂದ 23 ವರೆಗೆ) ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿದ್ದು, ಈ ಹಿನ್ನೆಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ.

ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರಬೇಕು. ಸಾರ್ವಜನಿಕರು, ಮಕ್ಕಳು, ಕಾರ್ಮಿಕರು ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು ಮತ್ತು ಪ್ರವಾಸಿಗರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು.

ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ಮರ ಮತ್ತು ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿAದ ದೂರವಿರಬೇಕು. ದುರ್ಬಲವಾದ ಅಥವಾ ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ ಮತ್ತು ಮರಗಳ ಕೆಳಗೆ ನಿಲ್ಲಬಾರದು. ಈ ಮೇಲ್ಕಂಡ ಎಲ್ಲಾ ಅಂಶಗಳನ್ನು ಗುಡುಗು, ಸಿಡಿಲು ಹಾಗೂ ಮಳೆ ಗಾಳಿಯಂತಹ ಸಂದರ್ಭಗಳಲ್ಲಿ ಚಾಚೂ ತಪ್ಪದೇ ಕಡ್ಡಾಯವಾಗಿ ಪಾಲಿಸಬೇಕು.

ಸಾರ್ವಜನಿಕರು ಅಗತ್ಯವಿದ್ದಲ್ಲಿ ಮುಂಜಾಗೃತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು. ಹೆಚ್ಚಿನ ಮಾಹಿತಿಗಾಗಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಶುಲ್ಕ ರಹಿತ 1077, ದೂರವಾಣಿ ಸಂಖ್ಯೆ: 0820-2574802 ಅಥವಾ ಆಯಾ ತಾಲೂಕಾ ತಹಶೀಲ್ದಾರರ ಕಛೇರಿಗೆ ಕರೆ ಮಾಡಬಹುದಾಗಿದೆ.

ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *