LATEST NEWS
ಕರಾವಳಿಯಲ್ಲಿ 5 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ
ಮಂಗಳೂರು ಜುಲೈ 16: ಕಳೆದ ಮೂರು ದಿನಗಳಿಂದ ದುರ್ಬಲಗೊಂಡಿದ್ದ ಮಳೆ ನಿನ್ನೆ ರಾತ್ರಿಯಿಂದಲೇ ಮತ್ತೆ ಪ್ರಾರಂಭವಾಗಿದೆ. ಈ ನಡುವೆ ಮುಂದಿನ 5 ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಲಾಕ್ ಡೌನ್ ಜೊತೆಗೆ ಜಿಲ್ಲೆಯಲ್ಲಿ ಧಾರಾಕಾರ ಮಳೆಯೂ ಸುರಿಯುತ್ತಿದೆ.
ನಿನ್ನೆಯಿಂದ ನಿರಂತರವಾಗಿ ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿಯೂ ಜನ ಖರೀದಿಗೆ ಇಳಿಯಲು ನಿರಾಸಕ್ತಿ ತೋರಿಸುತ್ತಿದ್ದಾರೆ. ಜಿಲ್ಲೆಯ ಪುತ್ತೂರು, ಸುಬ್ರಹ್ಮಣ್ಯ, ಬೆಳ್ತಂಗಡಿ ಹಾಗೂ ಸುಳ್ಯದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಪಶ್ಟಿಮಘಟ್ಟ ಪ್ರದೇಶಗಳಲ್ಲೂ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿಯಲ್ಲಿ ನೀರಿನ ಮಟ್ಟವೂ ಹೆಚ್ಚಾಗುತ್ತಿದೆ. ಜಿಲ್ಲೆಯಾದ್ಯಂತ ಮುಂಜಾನೆಯಿಂದಲೇ ಕಾರ್ಮೋಡ ಕವಿದ ವಾತಾವರಣ ಕಂಡು ಬಂದಿದ್ದು, ಲಾಕ್ ಡೌನ್ ಜೊತೆಗೆ ಮಳೆಯೂ ಜನರನ್ನು ರಸ್ತೆಗೆ ಇಳಿಯದಂತೆ ತಡೆದಿದೆ.
ಇನ್ನು ಉಡುಪಿ ಜಿಲ್ಲೆಯಾದ್ಯಂತ 60 ರಿಂದ 120 ಮಿಲಿ ಮೀಟರ್ ವರೆಗೆ ಮಳೆ ಬೀಳಬಹುದು ಎಂದು ಅಂದಾಜಿಸಲಾಗಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ ಹತ್ತು ಮಿಲಿಮೀಟರ್ ಮಳೆ ಬಿದ್ದಿದೆ. ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.