LATEST NEWS
ಫೆಂಗಲ್ ಚಂಡಮಾರುತ ಅಬ್ಬರ – ಉಡುಪಿ ಜಿಲ್ಲೆಯಲ್ಲೂ ಡಿಸೆಂಬರ್ 03 ರಂದು ಪಿಯುಸಿ ವರೆಗೆ ರಜೆ ಘೋಷಣೆ
ಉಡುಪಿ ಡಿಸೆಂಬರ್ 02: ಫೆಂಗಲ್ ಚಂಡಮಾರುತ ಹಿನ್ನಲೆ ಭಾರೀ ಮಳೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಮೂಲಕ ಧಾರಾಕಾರ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನಲೆ ಉಡುಪಿ ಜಿಲ್ಲೆಯಲ್ಲಿ ನಾಳೆ ಡಿಸೆಂಬರ್ 03 ರಂದು ಎಲ್ಲಾ ಅಂಗನವಾಡಿ ಶಾಲೆ ದ್ವಿತೀಯ ಪಿಯುಸಿವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ನಾಳೆ ಬೆಳಗ್ಗೆಯಿಂದ ಉಡುಪಿಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ರಾತ್ರಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ, ನದಿ, ಸಮುದ್ರ ಪಾತ್ರದ ಜನ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅರಬ್ಬೀ ಸಮುದ್ರದಲ್ಲಿ ಮೀನುಗಾರರು ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.
ಡಿಸೆಂಬರ್ 3 ರಂದು ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು 12ನೇ ತರಗತಿವರೆಗೆ) ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.