LATEST NEWS
ಅಕ್ಟೋಬರ್ 16 ರಿಂದ 19ರವರೆಗೆ ಭಾರೀ ಮಳೆ ಸಾಧ್ಯತೆ – ಸಮುದ್ರ ತೀರಕ್ಕೆ ತೆರಳದಂತೆ ಜಿಲ್ಲಾಡಳಿತ ಸೂಚನೆ
ಮಂಗಳೂರು ಅಕ್ಟೋಬರ್ 15: ವಾಯುಭಾರ ಕುಸಿತ ಹಿನ್ನಲೆ ಅ.16ರಿಂದ 19ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇದ್ದು, ನದಿ ತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು ಹಾಗೂ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸಲು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ.
ಉಡುಪಿ ಜಿಲ್ಲೆಯಲ್ಲೂ ಮಳೆಯಾಗುವ ಸಾಧ್ಯತೆ ಹಿನ್ನಲೆ ಪ್ರವಾಸಿಗರು, ಸಾರ್ವಜನಿಕರು, ಮೀನುಗಾರರು ನದಿ, ಜಲಪಾತ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.