Connect with us

    LATEST NEWS

    ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ – ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

    ಬೆಂಗಳೂರು ಸೆಪ್ಟೆಂಬರ್ 08: ಬೆಳ್ತಂಗಡಿಯಲ್ಲಿ ನಡೆದ ವಿಧ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಮರು ತನಿಖೆ ನಡೆಸುವಂತೆ ಸರಕಾರಕ್ಕೆ ಆದೇಶಿಸಲು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿದೆ.


    ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್, ಬೆಳ್ತಂಗಡಿಯ ಜಿ ನವೀನ್ ಕುಮಾರ್ ಮತ್ತು ಬಲ್ವಾಡು ಪುತ್ತೂರಿನ ವಿನಾಯಕ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು. ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರಾದ ಅರುಣ್ ಶ್ಯಾಮ್ ವಿಧ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದಲ್ಲಿ ಆರೋಪಿಸಲಾದ ವ್ಯಕ್ತಿಯ ಮೇಲೆ ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆ ನ್ಯಾಯಾಲಯ ಖುಲಾಸೆಗೊಳಿಸಿದೆ.


    ಆದರೆ ನಿಜವಾದ ದೋಷಿ ಪ್ರಕರಣದಿಂದ ತಪ್ಪಿಸಿಕೊಂಡಿದ್ದಾರೆ. ಪ್ರಕರಣ ನಡೆದ ನಂತರ ತನಿಖಾಧಿಕಾರಿ ಮತ್ತು ವೈದ್ಯರಿಂದ ಕೆಲವೊಂದು ಲೋಪಗಳು ನಡೆದಿವೆ. ಇದರಿಂದ ಮರು ತನಿಖೆ ನಡೆಸಬೇಕು ಎಂಬ ಅಭಿಪ್ರಾಯ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಹೀಗಾಗಿ, ಸಿಬಿಐ, ಇಲ್ಲವೇ ಸ್ವತಂತ್ರ ತನಿಖಾ ಸಂಸ್ಥೆ ಅಥವಾ ಎಸ್‌ಐಟಿಯಿಂದ ಹೊಸದಾಗಿ/ಮರು ತನಿಖೆ ನಡೆಸುವಂತೆ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿದ್ದರು.
    ಅದಕ್ಕೆ ಪ್ರತಿಕ್ರಿಯಿಸಿದ ಪೀಠವು ಪ್ರಕರಣದಲ್ಲಿ ಸರ್ಕಾರ, ಮೂಲ ದೂರುದಾರರು ಅಥವಾ ಸಂತ್ರಸ್ತ ಕುಟುಂಬವು ಆರೋಪಿಯನ್ನು ದೋಷಮುಕ್ತಗೊಳಿಸಿದ ವಿಚಾರಣಾಧೀನ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ. ಮೇಲ್ಮನವಿಯಲ್ಲಿ ತನಿಖಾ ಲೋಪಗಳನ್ನು ಪರಿಗಣಿಸಬಹುದಾಗಿದೆ ಎಂದು ನುಡಿಯಿತು.


    ಸೌಜನ್ಯ ಪ್ರಕರಣದ ಕುರಿತಂತೆ ನಡೆಯುವ ಪ್ರತಿಭಟನೆ ಅಥವಾ ಧರಣಿ ಹಾಗೂ ಸಾರ್ವಜನಿಕರ ಭಾವನೆಗಳಿಂದ ಕಾನೂನು ಚೌಕಟ್ಟು ಮೀರಲು ಸಾಧ್ಯವಿಲ್ಲ. ಅರ್ಜಿದಾರರ ಉದ್ದೇಶ ಒಳ್ಳೆಯದಿದ್ದರೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕಾನೂನಿನ ಮಿತಿ ಅರಿತು ವ್ಯವಹರಿಸಬೇಕಾಗುತ್ತದೆ. ಅದರಂತೆ ಅರ್ಜಿ ಹಿಂಪಡೆದು ನಿಮ್ಮ ಮನವಿಗಳ ಕುರಿತು ಕಾನೂನಿನಡಿ ಲಭ್ಯವಿರುವ ಪರ್ಯಾಯ ವಿಧಾನಗಳ ಮೂಲಕ ಪರಿಹಾರ ಪಡೆದುಕೊಳ್ಳಬಹುದು ಎಂದು ತಿಳಿಸಿತು.

    ಅರ್ಜಿ ಹಿಂಪಡೆಯಲು ನಿರಾಕರಿಸಿದ ಅರ್ಜಿದಾರ ಪರ ವಕೀಲರು, ಅರ್ಜಿ ಸಂಬಂಧ ಮೆರಿಟ್ ಮೇಲೆ ನ್ಯಾಯಾಲಯವು ಆದೇಶ ಮಾಡಬೇಕು ಎಂದು ಕೋರಿದರು. ಅದಕ್ಕೆ ಒಪ್ಪಿದ ಪೀಠವು ಅರ್ಜಿಯನ್ನು ವಜಾಗೊಳಿಸಲಾಗಿದೆ. ಆ ಕುರಿತು ವಿವರವಾದ ಆದೇಶ ಹೊರಡಿಸಲಾಗುವುದು ಎಂದಿತು.

    Share Information
    Advertisement
    Click to comment

    Leave a Reply

    Your email address will not be published. Required fields are marked *