KARNATAKA
ಗೋಹತ್ಯೆ ನಿಷೇಧ ಕಾಯ್ದೆ: ಸೆಕ್ಷನ್ 5ರ ಜಾರಿಗೆ ಹೈಕೋರ್ಟ್ ಅನುಮತಿ
ಬೆಂಗಳೂರು, ಎಪ್ರಿಲ್ 19: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಸೆಕ್ಷನ್ 5 ಅಡಿಯಲ್ಲಿ ರೂಪಿಸಿರುವ ನಿಯಮಗಳನ್ನು ಜಾರಿಗೆ ತರಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿ ಆದೇಶಿಸಿದೆ.
ಗೋಹತ್ಯೆ ನಿಷೇಧ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರಿಫ್ ಜಮೀಲ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಸಂರಕ್ಷಣಾ ಕಾಯ್ದೆ ಸೆಕ್ಷನ್ 5ರಡಿ ನಿಯಮ ರೂಪಿಸಿ ಅವುಗಳನ್ನು ಜಾರಿಗೆ ತರುವವರೆಗೆ ಯಾವುದೇ ವ್ಯಕ್ತಿಯ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು 2021ರ ಜನವರಿ 20ರಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು.
ನ್ಯಾಯಾಲಯದ ನಿರ್ದೇಶನದಂತೆ ಕಾಯ್ದೆಯ ಸೆಕ್ಷನ್ 5ರ ಅಡಿಯಲ್ಲಿ ಜಾನುವಾರ ಸಾಗಣೆಗೆ ಸಂಬಂಧಿಸಿದಂತೆ ನಿಯಮ ರೂಪಿಸಲಾಗಿದೆ. ಆದ್ದರಿಂದ ಕಾಯ್ದೆಯ ಸೆಕ್ಷನ್ 5ನ್ನು ಜಾರಿಗೊಳಿಸಲು ಅನುಮತಿ ನೀಡಬೇಕು ಎಂದು ಕೋರಿದರು.
ಸರ್ಕಾರದ ಮನವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅರ್ಜಿದಾರರ ಪರ ವಕೀಲರು, ಕಾಯ್ದೆಯ ಸಿಂಧುತ್ವ ಪ್ರಶ್ನಿಸಿಯೇ ಅರ್ಜಿ ಸಲ್ಲಿಸಲಾಗಿದೆ. ಕಾಯ್ದೆ ಮತ್ತು ನಿಯಮಗಳನ್ನು ಜಾರಿ ಮಾಡುವುದರಿಂದ ನಿರ್ದಿಷ್ಟ ಸಮುದಾಯದಕ್ಕೆ ತೊಂದರೆ ಉಂಟಾಗಲಿದೆ. ಆದ್ದರಿಂದ ಸೆಕ್ಷನ್ 5ರ ಜಾರಿಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದರು.
ಏನಿದು ಸೆಕ್ಷನ್ 5?:
ಗೋಹತ್ಯೆ ಕಾಯ್ದೆಯ ಸೆಕ್ಷನ್ 5 ಪ್ರಕಾರ ಯಾವುದೇ ವ್ಯಕ್ತಿ ಯಾವುದೇ ರೀತಿಯಲ್ಲೂ ರಾಜ್ಯ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಕೊಲ್ಲುವ ಉದ್ದೇಶಕ್ಕೆ ಜಾನುವಾರುಗಳನ್ನು ಸಾಗಿಸಬಾರದು ಅಥವಾ ಸಾಗಣೆಗೆ ಅವಕಾಶ ಮಾಡಿಕೊಡಬಾರದು.
ನಿಯಮ ಉಲ್ಲಂಘಿಸಿ ಸಾಗಣೆಗೆ ಕಾರಣವಾದರೆ ಅದು ಅಪರಾಧ ಕೃತ್ಯವಾಗಲಿದೆ. ಆದರೆ, ಕೃಷಿ ಮತ್ತು ಪಶುಸಂಗೋಪನೆ ಉದ್ದೇಶಕ್ಕೆ ಕೇಂದ್ರ ಅಥವಾ ರಾಜ್ಯ ಸರ್ಕಾರ ನಿಗದಿಪಡಿಸಿರುವ ನಿಯಮಗಳ ಅನುಸಾರ ಜಾನುವಾರು ಸಾಗಣೆ ಮಾಡುವುದು ಅಪರಾಧ ಕೃತ್ಯವಾಗುವುದಿಲ್ಲ.