KARNATAKA
ಎಸಿಬಿ ರದ್ದುಗೊಳಿಸಿದ ರಾಜ್ಯ ಹೈಕೋರ್ಟ್…ಮತ್ತೆ ಫೀಲ್ಡ್ ಗೆ ಲೋಕಾಯುಕ್ತ….!!
ಬೆಂಗಳೂರು ಅಗಸ್ಟ್ 11: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಹೈಕೋರ್ಟ್ ಎಸಿಬಿಯನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದು, ಎಸಿಬಿಗೆ ನೀಡಲಾಗಿದ್ದ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತ ಸಂಸ್ಥೆಗೆ ವರ್ಗಾಹಿಸಬೇಕೆಂದು ತಿಳಿಸಿದೆ. ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ.
ಎಸಿಬಿಯ ಅಗತ್ಯತೆಯನ್ನು ಪ್ರಶ್ನಿಸಿ ಬೆಂಗಳೂರಿನ ವಕೀಲ ಚಿದಾನಂದ ಅರಸ್, ವಕೀಲರ ಸಂಘ ಮತ್ತು ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ನ್ಯಾಯಮೂರ್ತಿ ಬಿ ವೀರಪ್ಪ ಮತ್ತು ನ್ಯಾಯಮೂರ್ತಿ ಕೆ ಎಸ್ ಹೇಮಲೇಖಾ ಅವರಿದ್ದ ವಿಭಾಗೀಯ ಪೀಠವು ವಿಚಾರಣೆಗೆ ಅಂಗೀಕರಿಸಿತ್ತು. 2016ರ ಮಾರ್ಚ್‌ನಲ್ಲಿ ರಾಜ್ಯ ಸರ್ಕಾರವು ಎಸಿಬಿ ರಚನೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಅಧಿಕಾರವನ್ನು ಕರ್ನಾಟಕ ಲೋಕಾಯುಕ್ತದಿಂದ ಹಿಂಪಡೆದು ಹೊರಡಿಸಿದ ಅಧಿಸೂಚನೆಗಳನ್ನು ಅರ್ಜಿದಾರರು ಪ್ರಶ್ನಿಸಿದ್ದರು.
ಎಸಿಬಿ ತನ್ನ ವ್ಯಾಪ್ತಿಯಲ್ಲಿರುವ ಪ್ರಕರಣಗಳು ಮತ್ತು ಅಧಿಕಾರಿಗಳನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾಯಿಸಲು ಹೈಕೋರ್ಟ್ ನಿರ್ದೇಶನ ನೀಡಿದ್ದು, ಅವರು ಆ ಪ್ರಕರಣಗಳನ್ನು ಮುಂದೆ ಕೈಗೆತ್ತಿಕೊಳ್ಳಬೇಕು ಮತ್ತು ಭ್ರಷ್ಟಾಚಾರ ನಿರ್ಮೂಲನೆಗೆ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಲು ಆ ಅಧಿಕಾರಿಗಳ ಸೇವೆಯನ್ನು ಬಳಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದೆ. ಅಂತೆಯೇ ಸಾರ್ವಜನಿಕರ ಹಿತದೃಷ್ಟಿಯಿಂದ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಮತ್ತು ಲೋಕಾಯುಕ್ತ ಮತ್ತು ಉಪ ಲೋಕಾಯುಕ್ತರಾಗಿ ಸಮರ್ಥ ವ್ಯಕ್ತಿಯನ್ನು ನೇಮಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.