KARNATAKA
ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗಲ್ಲ -ಹೈಕೋರ್ಟ್
ಬೆಂಗಳೂರು ಅಕ್ಟೋಬರ್ 16: ಜೈ ಶ್ರೀರಾಮ್ ಘೋಷಣೆ ಕೂಗಿದ ಕೂಡಲೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೈಕೋರ್ಟ್ ಮಂಗಳವಾರ ಹೇಳಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳ ವಿರುದ್ಧ ಧಾರ್ಮಿಕ ನಂಬಿಕೆಗಳ ಧಕ್ಕೆ ತಂದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದ ಹೈಕೋರ್ಟ್, ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ ಐಆರ್ ಹಾಗೂ ಸಳೀಯ ಜೆಎಂಎಫ್‌ಸಿ ಕೋರ್ಟ್ ವಿಚಾರಣೆ ರದ್ದುಪಡಿಸುವಂತೆ ಕೋರಿ ಪುತ್ತೂರಿನ ಬಿಳಿನೆಲೆ ಗ್ರಾಮದ ಕೀರ್ತನ್ ಮತ್ತು ಮಂಗಳೂರಿನ ಕೈಕಂಬದ ಸಚಿನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶಿಸಿದೆ.
ಕಡಬ ತಾಲೂಕು ಐತ್ತೂರು ಗ್ರಾಮದ ಮರ್ಧಾಳ ಎಂಬಲ್ಲಿರುವ ಬದ್ರಿಯಾ ಜುಮ್ಮಾ ಮಸೀದಿಯ ಆವರಣಕ್ಕೆ 2024ರ ಸೆಪ್ಟೆಂಬರ್ 24ರಂದು ರಾತ್ರಿ ಸುಮಾರು 10.50ರ ಸಮಯಕ್ಕೆ ಅಕ್ರಮವಾಗಿ ಪ್ರವೇಶಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ ಮತ್ತು ಬ್ಯಾರಿಗಳನ್ನು ಬದುಕಲು ಬಿಡುವುದಿಲ್ಲ ಎಂದು ಬೊಬ್ಬೆ ಹಾಕಿದ ಆರೋಪ ಅರ್ಜಿದಾರರ ಮೇಲಿದೆ.
ಪ್ರಕರಣವನ್ನು ಸ್ಥಳೀಯ ಜೆಎಂಎಫ್‌ಸಿ ಕೋರ್ಟ್ ವಿಚಾರಣೆ ನಡೆಸುತ್ತಿತ್ತು. ಇದರಿಂದ ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ಪುರಸ್ಕರಿಸಿರುವ ಹೈಕೋರ್ಟ್, ದೂರುದಾರರು ನೆಲೆಸಿರುವ ಭಾಗದಲ್ಲಿ ಹಿಂದೂ- ಮುಸ್ಲಿಮರು ಒಟ್ಟಾಗಿ ಸೌರ್ಹಾದತೆಯಿಂದ ಜೀವಿಸುತ್ತಿರುವುದಾಗಿ ದೂರಿನಲ್ಲಿಯೇ ಹೇಳಲಾಗಿದೆ. ಆದರೆ, ಅರ್ಜಿದಾರರ ವಿರುದ್ಧ ಧಾರ್ಮಿಕ ಭಾವನೆಗೆ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿದ. ಕೆರಳಿಸಿದ ಆರೋಪ ಮೇಲೆ ಐಪಿಸಿ ಸೆಕ್ಷನ್ 295ಎ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಸೆಕ್ಷನ್ 295ಅ ಪ್ರಕಾರ ಉದ್ದೇಶಪೂರ್ವಕವಾಗಿ ಯಾವುದೇವರ್ಗದಧಾರ್ಮಿಕಭಾವನೆಗಳನ್ನು, ಅದರ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವುದು, ಕೆರಳಿಸುವುದು ಅಪರಾಧ ಕೃತ್ಯವಾಗುತ್ತದೆ. ಈ ಯಾರಾದರೂ ‘ಜೈ ಶ್ರೀರಾಮ್’ ಎಂದು ಕೂಗಿದರೆ ಅದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ ಎಂಬುದುಅರ್ಥವಾಗುವುದಿಲ್ಲ. ಪ್ರಕರಣದಲ್ಲಿ ಯಾವುದೇ ಅಪರಾಧ ಕಂಡು ಬರುತ್ತಿಲ್ಲ. ಹೀಗಿರುವಾಗ ಅರ್ಜಿದಾರರ ವಿರುದ್ಧ ಪ್ರಕರಣದ ವಿಚಾರಣೆ ಮುಂದುವರಿಸಲು ಅನುಮತಿ ನೀಡುವುದು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.