ಜೈಪುರ, ಏಪ್ರಿಲ್ 10: ಹಾಡುಹಗಲೇ ಬೈಕ್ ನಲ್ಲಿ ಹೋಗುತ್ತಿದ್ದ ಯುವತಿಗೆ ಬೈಕ್ ನಲ್ಲಿ ಬಂದ ಇಬ್ಬರು ಮುಟ್ಟಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೆ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಜೈಪುರದಲ್ಲಿ ಈ ಘಟನೆ ನಡೆದಿದ್ದು, ಯುವತಿಯೊಬ್ಬರು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದ ಇಬ್ಬರು ಕಿಡಿಗೇಡಿಗಳು ಆಕೆಗೆ ದೈಹಿಕವಾಗಿ ಕಿರುಕುಳ ನೀಡಲು ಯತ್ನಿಸಿದ್ದಾರೆ. ಈ ದೃಶ್ಯವನ್ನು ಸಾರ್ವಜನಿಕರೊಬ್ಬರು ಚಿತ್ರೀಕರಿಸಿದ್ದು, ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಸ್ವಯಂಪ್ರೇರಿತವಾಗಿ (Suo Motu) ದೂರು ದಾಖಲಿಸಿಕೊಂಡ ಪೊಲೀಸರು ವಿಡಿಯೋದಲ್ಲಿ ಕಂಡುಬಂದ ವಾಹನದ ನೋಂದಣಿ ಸಂಖ್ಯೆಯ ಆಧಾರದ ಮೇಲೆ ಟೋಂಕ್ ಜಿಲ್ಲೆಯ ನಿವಾಸಿಗಳಾದ ಮನ್ರಾಜ್ ಮೀನಾ ಮತ್ತು ಸುದಾಮಾ ಮೀನಾ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.