Connect with us

    UDUPI

    ಜನತಾ ದರ್ಶನದಲ್ಲಿ ಸಾರ್ವಜನಿಕರಿಗೆ ಅಹವಾಲು ಸಲ್ಲಿಸಲು ಅವಕಾಶ: ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ 

    ಉಡುಪಿ, ಸೆಪ್ಟಂಬರ್ 22  : ಸಾರ್ವಜನಿಕರ ಅಹವಾಲು ಸ್ವೀಕರಿಸುವ ಜನತಾ ದರ್ಶನ ಕಾರ್ಯಕ್ರಮವು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರನೇತೃತ್ವದಲ್ಲಿ ಸೆಪ್ಟಂಬರ್ 25 ರಂದು ನಗರದ ಮಣಿಪಾಲ ರಜತಾದ್ರಿಯ ಅಟಲ್
    ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಬೆಳಗ್ಗೆ 10.30 ಕ್ಕೆ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಅವರು ತಿಳಿಸಿದರು.


    ಅವರು ಇಂದು ವೀಡಿಯೋ ಕಾನ್ಫ್ರೆನ್ಸ ಮೂಲಕ ಜನತಾ ದರ್ಶನದ ಪೂರ್ವ ಸಿದ್ಧತಾ ಸಭೆ ನಡೆಸಿ ಮಾತನಾಡಿದರು. ಸರ್ಕಾರದ ನಿರ್ದೇಶದಂತೆ ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನ ಕಾರ್ಯಕ್ರಮವನ್ನು ಸೆಪ್ಟಂಬರ್ 25 ರಂದು ಹಮ್ಮಿಕೊಳ್ಳಲಾಗಿದ್ದು, ಅದರನ್ವಯ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸರಕಾರಿ ಕೆಲಸ ಸಂಬಂಧ ತಮ್ಮ ಅಹವಾಲುಗಳೇನಾದರೂ ಇದ್ದಲ್ಲಿ ಖುದ್ದಾಗಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಹವಾಲುಗಳನ್ನು
    ಸಲ್ಲಿಸಬಹುದಾಗಿದೆ ಎಂದರು.

    ಅಂದು ಬೆಳಗ್ಗೆ 10.30 ಕ್ಕೆ ಸಾರ್ವಜನಿಕರಿಂದ ಕುಂದು ಕೊರತೆ ಅಹವಾಲುಗಳನ್ನು ವಿವಿಧ ಇಲಾಖೆಯ ಅಧಿಕಾರಿಗಳಿಂದ ಸ್ವೀಕರಿಸಲಾಗುತ್ತದೆ. ನಂತರ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸ್ಥಳದಲ್ಲಿಯೇ ವಿಲೇವಾರಿ ಮಾಡಬೇಕಾದ
    ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು. ಒಂದೊಮ್ಮೆ ಸರ್ಕಾರದ ಗಮನ ಸೆಳೆಬೇಕಾದ ಅರ್ಜಿಗಳನ್ನು ಸರ್ಕಾರಿ ಮಟ್ಟದಲ್ಲಿ ಕ್ರಮಕೈಗೊಳ್ಳಲಾಗುತ್ತದೆ ಎಂದರು.

    ಜಿಲ್ಲೆಯ ಸಾರ್ವಜನಿಕರಿಂದ ಬರುವ ಕುಂದುಕೊರತೆ ಅರ್ಜಿಗಳನ್ನು ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್‌ಎಸ್) ಪೋರ್ಟಲ್‌ದಲ್ಲಿ ನೊಂದಣಿ ಮಾಡಬೇಕು. ನುರಿತ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ನಿಯೋಜಿಸಬೇಕು ಎಂದರು. ನೋಂದಣಿಯಾದ ಅರ್ಜಿಗಳನ್ನು ನಿಗದಿತ ಸಮಯದೊಳಗೆ ಇತ್ಯರ್ಥಪಡಿಸಲು ಸ್ಥಳದಲ್ಲಿಯೇ ಅಧಿಕಾರಿಗಳು ಸನ್ನದ್ಧರಾಗಿರಬೇಕು. ಹಲವು ದಿನಗಳಿಂದ ಬಾಕಿ ಉಳಿದಿರುವ ಅರ್ಜಿಗಳನ್ನು ವಿಲೇವಾರಿ ಮಾಡಲು ಗಮನ ಹರಿಸಬೇಕು ಎಂದರು.
    ಜನತಾ ದರ್ಶನದ ಸಂದರ್ಭದಲ್ಲಿ ಅಧಿಕಾರಿಗಳು ಬೆಳಗ್ಗೆ 9.30 ಕ್ಕೆ ಉಪಸ್ಥಿತರಿದ್ದು, ಯಾವುದೇ ಲೋಪಗಳಾಗದಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವುದರೊಂದಿಗೆ ಸಾರ್ವಜನಿಕರಿಗೆ ಸ್ಪಂದಿಸಬೇಕು. ಸಭೆಗೆ ಅಗಮಿಸುವ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳಾದ
    ಕುಡಿಯುವ ನೀರು, ಲಘು ಉಪಹಾರ ಸೇರಿದಂತೆ ಮತ್ತಿತರ ಸೌಕರ್ಯಗಳನ್ನು ಒದಗಿಸಬೇಕು ಎಂದ ಅವರು, ಪ್ರತೀ ಹದಿನೈದು ದಿನಗಳಿಗೊಮ್ಮೆ ತಾಲೂಕುವಾರು ಜನತಾ ದರ್ಶನವನ್ನು ಹಮ್ಮಿಕೊಳ್ಳಲಾಗುವುದು ಎಂದರು.

    ಸಭೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್, ವಿವಿಧ ತಾಲೂಕುಗಳ ತಹಶೀಲ್ದಾರ್‌ಗಳು, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply