ಕಲಬುರಗಿ, ಏಪ್ರಿಲ್ 24: ಜಿಲ್ಲೆಯ ಚಿಂಚೋಳಿ-ತೆಲಂಗಾಣ ರಾಜ್ಯ ಹೆದ್ದಾರಿಯಲ್ಲಿ ಸಿಮೆಂಟ್ ಟ್ಯಾಂಕರ್, ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಇಂದು ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಸುಮಾರು 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ತೆಲಂಗಾಣದ ತಾಂಡೂರು ಕಡೆಯಿಂದ ಚಿಂಚೋಳಿ ಕಡೆಗೆ ಬರುತ್ತಿದ್ದ ಸಿಮೆಂಟ್ ಟ್ಯಾಂಕರ್, ಪೋಲಕಪಳ್ಳಿ ತಾಂಡಾ ಬಳಿ ತನ್ನ ಮುಂಭಾಗದಲ್ಲಿದ್ದ ಆಟೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದೆ. ಈ ವೇಳೆ ನಿಯಂತ್ರಣ ತಪ್ಪಿದ ಟ್ಯಾಂಕರ್, ಚಿಂಚೋಳಿಯಿಂದ ವೆಂಕಟಾಪುರಕ್ಕೆ ಹೊರಟಿದ್ದ ಖಾಸಗಿ ಬಸ್ಸಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಆಟೋ ಕೂಡ ಜಖಂಗೊಂಡಿದ್ದು, ರಸ್ತೆಯ ಮೇಲೆ ವಾಹನಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ಅಪಘಾತದಲ್ಲಿ ಆಟೋ ಚಾಲಕನಿಗೆ ತೀವ್ರವಾದ ಪೆಟ್ಟಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಬಸ್ಸಿನಲ್ಲಿದ್ದ ಸುಮಾರು 9 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಮತ್ತು ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಚಿಕಿತ್ಸೆಗಾಗಿ ಚಿಂಚೋಳಿಯ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಕೆಲವರನ್ನು ಕಲಬುರಗಿಯ ಜಿಲ್ಲಾ ಆಸ್ಪತ್ರೆಗೆ ರವಾನಿಸಲು ಕ್ರಮ ಕೈಗೊಳ್ಳಲಾಗಿದೆ.
ಘಟನಾ ಸ್ಥಳಕ್ಕೆ ಚಿಂಚೋಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ರೇನ್ ಮೂಲಕ ರಸ್ತೆಯಲ್ಲಿದ್ದ ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಟ್ಯಾಂಕರ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.