DAKSHINA KANNADA
ಕಂಕನಾಡಿ ವಾರ್ಡಿನ ನೆಕ್ಕರೆಮಾರ್ ಪರಿಸರದಲ್ಲಿ 1.85 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಚಾಲನೆ
ಮಂಗಳೂರು ಮಾರ್ಚ್ 04: ನಗರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ದಾಖಲೆ ಪ್ರಮಾಣದ ಅನುದಾನ ತರಲಾಗಿದ್ದು ನಗರದಲ್ಲಿ ನಿರಂತರ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು.
ಕಂಕನಾಡಿ ವಾರ್ಡಿನ ನೆಕ್ಕರೆಮಾರ್ ಪರಿಸರದಲ್ಲಿ 1.85 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಕಳೆದ 5 ವರ್ಷಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ತಡೆಯಿಲ್ಲದೆ ನಿರಂತರವಾಗಿ ನಡೆಯುತ್ತಿದೆ. ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರದ ಅನೇಕ ಯೋಜನೆಗಳು ಮಂಗಳೂರು ನಗರದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ನೆಕ್ಕರೆಮಾರ್ ಪರಿಸರದಲ್ಲಿ ರಾಜಕಾಲುವೆ ಅಭಿವೃದ್ಧಿ, ರಸ್ತೆ ನಿರ್ಮಾಣ ಹಾಗೂ ಚರಂಡಿ ಅಭಿವೃದ್ಧಿಗೆ 1.85 ಕೋಟಿ ರೂಪಾಯಿ ಬಿಡುಗಡೆಗೊಳಿಸಿದ್ದು, ಈ ಭಾಗದ ಸಾರ್ವಜನಿಕರ ಸಮಸ್ಯೆಯನ್ನು ಬಗೆಹರಿಸಲು ಅನುದಾನ ಬಿಡುಗಡೆಗೊಳಿಸಲಾಗಿದೆ. ನಗರದಲ್ಲಿ ಮಳೆಗಾಲದಲ್ಲಿ ಉಂಟಾಗುವ ಕೃತಕ ನೆರೆ ಬಾಧೆಯನ್ನು ತಪ್ಪಿಸಲು ಸಮಗ್ರವಾಗಿ ಚಿಂತನೆ ನಡೆಸಲಾಗಿದ್ದು ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ಬಿಡುಗಡೆಗೊಳಿಸಿ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಹೇಳಿದರು.