FILM
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಕ್ಯಾನ್ಸರ್ ಗೆ ಬಲಿ
ಬೆಂಗಳೂರು ಜುಲೈ11 : ಕನ್ನಡದ ಖ್ಯಾತ ನಿರೂಪಕಿ ನಟಿ ಅಪರ್ಣಾ ಅವರು ಇಂದು ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಕೆಲ ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ, ಇತ್ತೀಚೆಗೆ ಆಯತಪ್ಪಿ ಬಿದ್ದು ಗಾಯಮಾಡಿಕೊಂಡಿದ್ದರು. ಹೀಗಾಗಿ ಹಲವು ದಿನಗಳ ವಿಶ್ರಾಂತಿ ಪಡೆದಿದ್ದರು. ಅಪರ್ಣಾ ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಪರ್ಣಾ ನಟಿಸಿದ್ದರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ನಲ್ಲಿ ಅವರು ಭಾಗವಹಿಸಿದ್ದರು. 2015ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಎಂಬ ಪಾತ್ರವನ್ನು ಅಪರ್ಣಾ ಮಾಡಿದ್ದರು.
ಸಿನಿಮಾಗಿಂತ ನಿರೂಪಕಿಯಾಗಿ ಅಪರ್ಣಾ ಎಲ್ಲರ ಮನಗೆದ್ದಿದ್ದರು. ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡುವ ಮೂಲಕ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು. 90 ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು. ನಂತರ ಭಾರತ ಸರ್ಕಾರದ ವಿವಿಧ ಕಾರ್ಯಕ್ರಮದ ನಿರೂಪಣೆ, ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು.