FILM
ಹೃದಯಾಘಾತದಿಂದ ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ನಿಧನ

ಬೆಂಗಳೂರು ಅಕ್ಟೋಬರ್ 29: ಹೃದಯಾಘಾತದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಕಂಡು ಬಂದ ಹಿನ್ನಲೆ 11 ಗಂಟೆಗೆ ಅವರು ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು ಆದರೆ ಪರಿಸ್ಥಿತಿ ಬಿಗಡಾಯಿಸಿದ ಹಿನ್ನಲೆ ತಕ್ಷಣ ಅವರನ್ನು ವಿಕ್ರಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತುರ್ತು ನಿಗಾ ಘಟಕದಲ್ಲಿ ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗಿದೆ. ವಿಕ್ರಂ ಆಸ್ಪತ್ರೆಗೆ ಆಗಮಿಸಿದ ಸಂದರ್ಭ ಅವರಿಗೆ ತೀವ್ರ ಹೃದಯಾಘಾತವಾಗಿತ್ತು. ಅವರ ಆರೋಗ್ಯದ ಬಗ್ಗೆ ಏನನನ್ನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದರು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರ ಆರೋಗ್ಯ ಸ್ಥಿತಿ ಕ್ಷಣ ಕ್ಷಣಕ್ಕೂ ಬಿಗಡಾಯಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.

ಈ ನಡುವೆ ವಿಕ್ರಂ ಆಸ್ಪತ್ರೆಗೆ ಅಭಿಮಾನಿಗಳು ಆಗಮಿಸುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ನಿವಾಸದ ಬಳಿಯೂ ಭಾರೀ ಭದ್ರತೆ ಒದಗಿಸಲಾಗಿದೆ.