FILM
ನಟ ದರ್ಶನ್ ಗೆ ಚಿಕಿತ್ಸೆಗಾಗಿ ಆರು ವಾರಗಳ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್..!
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ ಗೆ ಹೈಕೋರ್ಟ್ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿ ಆದೇಶಿಸಿದೆ. ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ನ ಏಕಸದಸ್ಯ ಪೀಠ ಮಧ್ಯಂತರ ಜಾಮೀನು ನೀಡಿದೆ.
ದರ್ಶನ್ ಇಚ್ಚೆ ವ್ಯಕ್ತಪಡಿಸುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು. ಪಾಸ್ ಪಾಸ್ ಪೋರ್ಟ್ ವಶಕ್ಕೆ ನೀಡಬೇಕು ಎಂದು ಷರತ್ತು ವಿಧಿಸಿ ಹೈಕೋರ್ಟ್ ಜಾಮೀನು ನೀಡಿದೆ. ವೈದ್ಯಕೀಯ ಕಾರಣಕ್ಕಾಗಿ ಮಧ್ಯಂತರ ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. “ವೈದ್ಯಕೀಯ ಜಾಮೀನು ಕೋರಿರುವ ನಟ ದರ್ಶನ್ ಅವರ ಮಧ್ಯಂತರ ಅರ್ಜಿಯನ್ನು ಆರು ವಾರಗಳಿಗೆ ಸೀಮಿತಗೊಳಿಸಿ ಪುರಸ್ಕರಿಸಲಾಗಿದೆ. ದರ್ಶನ್ ತಮ್ಮ ಪಾಸ್‌ಪೋರ್ಟ್ ಅನ್ನು ವಿಚಾರಣಾಧೀನ ನ್ಯಾಯಾಲಯದ ವಶಕ್ಕೆ ಸಲ್ಲಿಸಬೇಕು. ದರ್ಶನ್ ತಮ್ಮ ಇಚ್ಛೆಯ ಆಸ್ಪತ್ರೆಯಲ್ಲಿ ತಕ್ಷಣ ಚಿಕಿತ್ಸೆಗೆ ಒಳಗಾಗಬಹುದು. ಆರೋಗ್ಯ ಪರಿಸ್ಥಿತಿ, ಪ್ರಸ್ತಾವಿತ ಚಿಕಿತ್ಸೆ ಮತ್ತು ಎಷ್ಟು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಮತ್ತು ಆನಂತರದ ಚಿಕಿತ್ಸೆಗೆ ಸಂಬಂಧಿಸಿದಂತೆ ಒಂದು ವಾರದಲ್ಲಿ ವರದಿ ಸಲ್ಲಿಸಬೇಕು” ಎಂದು ನ್ಯಾಯಾಲಯ ಆದೇಶಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.
ಮಂಗಳವಾರ ನಡೆದಿದ್ದ ವಿಚಾರಣೆಯಲ್ಲಿ ದರ್ಶನ್ ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ ವಿ ನಾಗೇಶ್ ಅವರು “ದರ್ಶನ್ ಅವರು ಬೆನ್ನುಹುರಿ/ನರದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಸಾಂಪ್ರದಾಯಿಕ ಅಥವಾ ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಈಗ ಅವರಿಗೆ ಪಾದದಲ್ಲಿ ಜೋಮು ಕಾಣಿಸುತ್ತಿದೆ, ಇದು ಮುಂದುವರಿದರೆ ಮೂತ್ರ ಸಮಸ್ಯೆ ಉಂಟಾಗಲಿದೆ. ದೀರ್ಘಾವಧಿಯಲ್ಲಿ ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಲಿದ್ದಾರೆ ಎಂದು ಬಳ್ಳಾರಿಯ ಸರ್ಕಾರಿ ಆಸ್ಪತ್ರೆಯ ನರರೋಗ ತಜ್ಞರಾದ ವಿಶ್ವನಾಥ್ ಅವರು ವರದಿ ನೀಡಿದ್ದಾರೆ. ಹೀಗಾಗಿ, ವೈದ್ಯಕೀಯ ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದ್ದರು.
“ದರ್ಶನ್ ಈಗಾಗಲೇ ಎರಡು ಬಾರಿ ಮೈಸೂರಿನ ಖಾಸಗಿ ಆಸ್ಪತ್ರೆಯಾದ ಅಪೊಲೊದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ತಮ್ಮದೇ ಖರ್ಚಿನಲ್ಲಿ ಈಗಲೂ ಅಲ್ಲಿಯೇ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಸುಪ್ರೀಂ ಕೋರ್ಟ್ ಹಾಗೂ ಕರ್ನಾಟಕ ಹೈಕೋರ್ಟ್ ಸಾಕಷ್ಟು ಪ್ರಕರಣಗಳಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಿವೆ. ಮೈಸೂರಿನಲ್ಲಿ ಚಿಕಿತ್ಸೆ ಪಡೆಯುವುದರಿಂದ ಪ್ರಾಸಿಕ್ಯೂಷನ್ ಸಾಕ್ಷಿಗೂ ಯಾವುದೇ ಸಮಸ್ಯೆಯಾಗುವುದಿಲ್ಲ. ನ್ಯಾಯಾಲಯವು ಯಾವುದೇ ಷರತ್ತು ವಿಧಿಸಿ, ಮೂರು ತಿಂಗಳು ಮಧ್ಯಂತರ ಜಾಮೀನು ಮಂಜೂರು ಮಾಡಬೇಕು” ಎಂದು ಮನವಿ ಮಾಡಿದ್ದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಪ್ರಾಸಿಕ್ಯೂಷನ್ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನಕುಮಾರ್ ಅವರು “ನ್ಯಾಯಾಲಯವು ತಜ್ಞ ವೈದ್ಯರನ್ನು ಒಳಗೊಂಡ ವೈದ್ಯಕೀಯ ಮಂಡಳಿ ರಚಿಸಿ, ಅವರು ನೀಡುವ ವರದಿಯನ್ನು ಆಧರಿಸಿ ದರ್ಶನ್‌ಗೆ ವೈದ್ಯಕೀಯ ಜಾಮೀನು ಮಂಜೂರು ಮಾಡಬೇಕು. ಸುಪ್ರೀಂ ಕೋರ್ಟ್ ಸಹ ಹಲವು ಪ್ರಕರಣಗಳಲ್ಲಿ ವೈದ್ಯಕೀಯ ಮಂಡಳಿಯ ಶಿಫಾರಸ್ಸು ಆಧರಿಸಿ, ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ. ದರ್ಶನ್ ಬೆಂಗಳೂರಿಗೆ ಬಂದು ಇಲ್ಲಿ ವೈದ್ಯಕೀಯ ಮಂಡಳಿಯ ತಜ್ಞರ ತಪಾಸಣೆಗೆ ಒಳಗಾಗಲಿ. ವೈದ್ಯರು ಏನೆಲ್ಲಾ ಚಿಕಿತ್ಸೆ, ಎಷ್ಟು ದಿನ ಚಿಕಿತ್ಸೆ ಅಗತ್ಯವಿದೆ ಎಂದು ವರದಿ ನೀಡಲಿ. ಇದನ್ನು ಆಧರಿಸಿ ನ್ಯಾಯಾಲಯವು ನಿರ್ಧರಿಸಬೇಕು” ಎಂದು ಮನವಿ ಮಾಡಿದ್ದರು.
You must be logged in to post a comment Login