DAKSHINA KANNADA
ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಬೆಳ್ಳಂಬೆಳಗ್ಗೆ ಹಲವು ಸರ್ಕಾರಿ ಅಧಿಕಾರಿಗಳ ಮನೆ ಕಚೇರಿ ಕದ ತಟ್ಟಿದ ಲೋಕಾಯುಕ್ತ..!
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೆಂಗಳೂರು, ಮಂಗಳೂರು ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರಾರ್ಥಮಿಕ ಮಾಹಿತಿ ಪ್ರಕಾರ ರಾಜ್ಯದ 40 ಕಡೆ ಇಂದು ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಅಧಿಕಾರಿಗಳ ಮನೆಯ ಕದ ತಟ್ಟಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ ಕೊರಟಗೆರೆ ತಾಲೂಕು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಇಲಾಖೆಯ EE ಹನುಮಂತರಾಯಪ್ಪ ಅವರ ಮನೆ ಮತ್ತು ಫಾರಂ ಹೌಸ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಲೋಕಾಯುಕ್ತ ಎಸ್ಪಿ ವಲ್ಲಿಸಾಬ್ ಅವರ ನೇತೃತ್ವದಲ್ಲಿ ಏಕ ಕಾಲಕ್ಕೆ ಶಿರಾಗೇಟ್ ನಲ್ಲಿರುವ ಮನೆ ಹಾಗು ಮಿಡಿಗೇಶಿಯಲ್ಲಿರುವ ಫಾರಂ ಹೌಸ್ ಮೇಲೆ ದಾಳಿ ನಡೆದಿದೆ.
ಹಾಸನದಲ್ಲಿ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಹೆಲ್ತ್ ಇನ್‌ಸ್ಪೆಕ್ಟರ್ ಜಗನ್ನಾಥ್ ನಿವಾಸದ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್‌ಸ್ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದ ತಂಡ ದಾಳಿ ನಡೆಸಿದೆ. ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಹಾಗೂ ಕಚೇರಿ ಮೇಲೂ ದಾಳಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಇನ್ನು ಮಂಡ್ಯದಲ್ಲಿ ಪಿಡಬ್ಲ್ಯುಡಿ ಇಲಾಖೆ ಇಇ ಹರ್ಷ ಎಂಬವರ ಮನೆ, ಕಚೇರಿ, ಕುಟುಂಬಸ್ಥರು, ಸಂಬಂಧಿಕರ ಮನೆ ಮೇಲೂ ಲೋಕ ದಾಳಿ ಮಾಡಿದೆ. ಇವರ ಮನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿದೆ. ಮಂಡ್ಯದ ಕಚೇರಿ, ಮಾವನ ಮನೆ, ನಾಗಮಂಗಲದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಲಾಗಿದೆ. ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ಆರು ಕಡೆ ದಾಳಿ ಮಾಡಿದ್ದಾರೆ.
ಮುಡಾ ಇಂಜಿನಿಯರ್ ಯಜ್ಞೇಂದ್ರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೈಸೂರಿನ ಜೆ.ಪಿ.ನಗರದ ಮನೆ, ವಿಜಯನಗರದ ಅಪಾರ್ಟ್‌ಮೆಂಟ್, ಕೆ.ಆರ್.ನಗರ ತಾಲೂಕಿನ ನಗರ್ಲೆ ಗ್ರಾಮದಲ್ಲಿರುವ ಯಜ್ಞೇಂದ್ರ ಸಹೋದರನ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.
ತುಮಕೂರಿನಲ್ಲೂ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ತುಮಕೂರಿನ ಶಿರಾ ಗೇಟ್ ಬಳಿಯಿರುವ KRDL ಇಂಜಿನಿಯರ್ ಹನುಮಂತರಾಯಪ್ಪ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.