ಕಲಬುರಗಿ ನವೆಂಬರ್ 25: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಹೊಡೆದ ಪರಿಣಾಮ ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ ಸೇರಿದಂತೆ ಮೂವರು ಸಾವನಪ್ಪಿದ ಘಟನೆ ಜೇವರ್ಗಿ ಬೈಪಾಸ್ ಬಳಿ ನಡೆದಿದೆ.


ಮೃತರನ್ನು ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್‌ ಬೀಳಗಿ ಸಹೋದರ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಎಂದು ಗುರುತಿಸಲಾಗಿದೆ. ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಈ ಅಪಘಾತ ಸಂಭವಿಸಿದೆ. ಕಾರಿಗೆ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಆಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

Share Information