LATEST NEWS
1697 ಮತಗಳ ಅಂತರದಲ್ಲಿ ಭರ್ಜರಿ ಜಯಭೇರಿ ಬಾರಿಸಿದ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್
ಮಂಗಳೂರು ಅಕ್ಟೋಬರ್ 24: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1,697 ಮತಗಳ ಅಂತರದಿಂದ ಜಯ ಸಾಧಿಸಿದರು.
ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನೆರವೇರಿತ್ತು. ಒಟ್ಟು 5,906 ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದು, 12 ಮೇಜುಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆದಿದೆ. ಪ್ರತಿ ಮೇಜಿಗೆ ಕಣ್ಗಾವಲು ಮತ್ತು ಸಹಾಯಕ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಮಿಶ್ರಣ ಮತ್ತು ಸಿಂಧುತ್ವ ಪರಿಶೀಲನೆಯ ನಂತರ, ಮೊದಲ ಪ್ರಾಶಸ್ತ್ಯದ ಮತಗಳ ಅಂತಿಮ ಎಣಿಕೆ ನಡೆಸಲಾಯಿತು.
ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬಳಿಕ, ದಕ್ಷಿಣ ಕನ್ನಡದಲ್ಲಿ ತೆರವಾದ ವಿಧಾನಪರಿಷತ್ ಸ್ಥಾನಕ್ಕೆ ಅ. 21ರಂದು ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಕಿಶೋರ್ ಕುಮಾರ್ ಪುತ್ತೂರು ತಮ್ಮ ಮುಖ್ಯ ಪ್ರತಿಸ್ಪರ್ಧಿ, ಕಾಂಗ್ರೆಸ್‌ನ ರಾಜು ಪೂಜಾರಿ ವಿರುದ್ಧ ಗೆಲುವು ಸಾಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ
ಕಿಶೋರ್ ಅವರು 3.654 ಮತ ಪಡೆದು ಗೆಲುವಿನ ನಗೆ ಬೀರಿದರು. 1,957 ಮತ ಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರು ಎರಡನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಎಸ್‌ಡಿಪಿಐನ ಅನ್ವರ್ ಸಾದತ್ 195 ಮತ ಪಡೆದರು.
ಪಕ್ಷೇತರ ಅಭ್ಯರ್ಥಿ ದಿನಕರ ಉಳ್ಳಾಲ್ 9 ಮತ ಗಳಿಸಿರು. ಒಟ್ಟು 87 ಮತಗಳು ತಿರಸ್ಕೃತವಾಗಿದ್ದವು. ಈ ಕ್ಷೇತ್ರದಲ್ಲಿ 5,906 ಮತಗಳು ಚಲಾವಣೆಯಾಗಿದ್ದು, 5.819 ಸಿಂಧು ಮತಗಳಿದ್ದವು.
ಮತ ಎಣಿಕೆ ಇಲ್ಲಿನ ಕೊಡಿಯಾಲ್ ಬೈಲಿನ ಸೇಂಟ್ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆಯಿತು. ಕಿಶೋರ್ ಗೆಲುವು ಸಾಧಿಸುತ್ತಿದ್ದಂತೆಯೇ ಪಿವಿಎಸ್ ವೃತ್ತದ ಬಳಿ ಇರುವ ಬಿಜೆಪಿ ಕಚೇರಿ ಎದುರು ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.