ಕೊಲ್ಲೂರು ಜುಲೈ 06: ಇತಿಹಾಸ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೊರಾಂಗಣದಲ್ಲಿ ಭಕ್ತರೊಬ್ಬರ ವ್ಯಾನಿಟಿ ಬ್ಯಾಗ್ನಿಂದ ₹80,000 ನಗದು ಕಳವು ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಕೊಲ್ಲೂರು ಪೊಲೀಸರು ಯಶಸ್ವಿಯಾಗಿದ್ದಾರೆ. ದೂರು ದಾಖಲಾದ ಕೇವಲ 24 ಗಂಟೆಗಳ ಅವಧಿಯಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಭದ್ರಾವತಿ ಮೂಲದ ಮೂವರು ಮಹಿಳಾ ಕಳ್ಳಿಯರನ್ನು ಬಂಧಿಸಿ ಕಂಬಿ ಎಣಿಸುವಂತೆ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿಗಳಾದ ನೇತ್ರಾವತಿ (33), ಶಾರದಾ (50) ಹಾಗೂ ದುರ್ಗಮ್ಮ (44) ಬಂಧಿತ ಪ್ರಮುಖ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಜೋಶ್ ಹಾಗೂ ಅವರ ಪತ್ನಿ ನಿಮಿಶಾ ಎಂಬ ಭಕ್ತರು ಜುಲೈ 5ರಂದು ಬೆಳಿಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ದೇವರ ದರ್ಶನಕ್ಕಾಗಿ ಆಗಮಿಸಿದ್ದರು. ದೇವಸ್ಥಾನದ ಗರ್ಭಗುಡಿಯೊಳಗೆ ದೇವರ ದರ್ಶನ ಮುಗಿಸಿ ಹೊರಾಂಗಣಕ್ಕೆ ಬಂದು ನೋಡಿದಾಗ, ನಿಮಿಶಾ ಅವರ ವ್ಯಾನಿಟಿ ಬ್ಯಾಗ್ನ ಜಿಪ್ ತೆರೆದಿರುವುದು ಗಮನಕ್ಕೆ ಬಂದಿದೆ. ತಕ್ಷಣ ಪರಿಶೀಲಿಸಿದಾಗ ಬ್ಯಾಗ್ನಲ್ಲಿದ್ದ ಬರೋಬ್ಬರಿ ₹80,000 ನಗದು ಹೊಂದಿದ್ದ ಪರ್ಸ್ ಕಳವಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಸಂತ್ರಸ್ತ ದಂಪತಿ ತಕ್ಷಣವೇ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಕುಂದಾಪುರ ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ ಮತ್ತು ಬೈಂದೂರು ಸಿಐ ಶಿವಕುಮಾರ್ ಅವರ ನೇರ ಮಾರ್ಗದರ್ಶನದಲ್ಲಿ ಕೊಲ್ಲೂರು ಉಪನಿರೀಕ್ಷಕರಾದ ವಿನಯ ಎಂ. ಕೊರ್ಲಹಳ್ಳಿ, ಭೀಮಶಂಕರ್ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ತಕ್ಷಣವೇ ತನಿಖೆಗೆ ಇಳಿಯಿತು. ದೇವಸ್ಥಾನದ ಸಿಸಿಟಿವಿ ದೃಶ್ಯಾವಳಿಗಳನ್ನು ಜಾಲಾಡಿದ ಪೊಲೀಸರು, ಘಟನಾ ಸ್ಥಳದಲ್ಲಿ ಸಾರ್ವಜನಿಕರು ಮೊಬೈಲ್ನಲ್ಲಿ ಕ್ಲಿಕ್ಕಿಸಿದ್ದ ವಿವಿಧ ಫೋಟೋಗಳನ್ನು ಹಾಗೂ ತಾಂತ್ರಿಕ ನೆರವನ್ನು ಆಧರಿಸಿ 24 ಗಂಟೆಯೊಳಗೆ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಕಳ್ಳಿಯರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳ ಹಿನ್ನೆಲೆ ಪರಿಶೀಲಿಸಿದಾಗ ಇವರು ಸರಣಿ ಕಳ್ಳತನಗಳಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. ಬಂಧಿತ ದುರ್ಗಮ್ಮ ವಿರುದ್ಧ ಈಗಾಗಲೇ 2 ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಮತ್ತೊಬ್ಬ ಆರೋಪಿ ಶಾರದಾ ವಿರುದ್ಧ ಬೆಂಗಳೂರು ನಗರ ರೈಲ್ವೆ ಪೊಲೀಸ್ ಠಾಣೆಯಲ್ಲಿ 2 ಹಾಗೂ ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ 1 ಸೇರಿದಂತೆ ಒಟ್ಟು 3 ಪ್ರಕರಣಗಳು ದಾಖಲಾಗಿವೆ ಎಂದು ಉಡುಪಿ ಜಿಲ್ಲಾ ಪೊಲೀಸರು ಮಾಹಿತಿ ನೀಡಿದ್ದಾರೆ.