ಬೆಂಗಳೂರು, ಫೆಬ್ರವರಿ 18: ರಾಜ್ಯಾದ್ಯಂತ ಸಾರಿಗೆ ನೌಕರರು ಬೆಂಗಳೂರು ಚಲೋ ಹಮ್ಮಿಕೊಂಡಿದ್ದು, ಸರಕಾರಿ ಬಸ್ ಗಳ ಸಂಚಾರದಲ್ಲಿ ಫೆಬ್ರವರಿ 19 ರಂದು ವ್ಯತ್ಯಯವಾಗುವ ಸಾಧ್ಯತೆ ಇದೆ ಅಂತ ಹೇಳಲಾಗುತ್ತಿದೆ.

ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಫೆಬ್ರವರಿ. 19 ರಂದು ಬೆಂಗಳೂರು ಚಲೋಗೆ ಕರೆ ನೀಡಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಈ ಪ್ರತಿಭಟನೆಯಲ್ಲಿ ಸಾವಿರಾರು ನೌಕರರು ಜಮಾಯಿಸಿ ಸಾರಿಗೆ ನಿಗಮಗಳ ಕಳೆದ 38 ತಿಂಗಳ ವೇತನದ ಹಿಂಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡುವುದು , ವೇತನ ಪರಿಷ್ಕರಣೆ: 1-1-2024ಕ್ಕೆ ಅನ್ವಯವಾಗುವಂತೆ ನೂತನ ವೇತನ ಶ್ರೇಣಿ ಜಾರಿಗೊಳಿಸುವುದು. ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ನೀಡುವುದು. ಕೆಲಸದ ಅವಧಿಯಲ್ಲಿ ಅಧಿಕಾರಿಗಳಿಂದ ಕಾರ್ಮಿಕರಿಗೆ ನೀಡಲಾಗುವ ಕಿರುಕುಳವನ್ನು ಕೂಡಲೇ ನಿಲ್ಲಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಿದ್ದಾರೆ.

ಈ ಹಿಂದೆ ಮುಷ್ಕರ ನಡೆಸಿದ್ದಾಗ ಮನವೊಲಿಸಿದ್ದ ಸರ್ಕಾರ, ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಆದರೆ, ನಂತರ ಕ್ರಮ ಕೈಗೊಂಡಿರಲಿಲ್ಲ. ಸಾರಿಗೆ ಮುಷ್ಕರವನ್ನು ಹತ್ತಿಕ್ಕಲು ಸರ್ಕಾರ ಈಗಾಗಲೇ ಸಿದ್ಧತೆ ನಡೆಸಿದ್ದು, ಪ್ರತಿಭಟನಾ ನಿರತ ನೌಕರರ ವಿರುದ್ಧ ‘ಎಸ್ಮಾ’ ಜಾರಿ ಮಾಡುವ ಅಥವಾ ವೇತನ ಕಡಿತದಂತಹ ಕಠಿಣ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅನಧಿಕೃತವಾಗಿ ಕರ್ತವ್ಯಕ್ಕೆ ಗೈರಾಗುವ ನೌಕರರ ವಿರುದ್ಧ ಹೈಕೋರ್ಟ್ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಆದಾಗ್ಯೂ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾರಿಗೆ ಸೇವೆ ಭಾಗಶಃ ವ್ಯತ್ಯಯವಾಗುವ ಸಾಧ್ಯತೆ ಇದ್ದು, ಪ್ರಯಾಣಿಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.