KARNATAKA
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದ್ದ ಚಿರತೆ ಕಾಡ್ಗಿಚ್ಚಿಗೆ ಬಲಿ

ತುಮಕೂರು: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದ್ದ ಚಿರತೆಯೊಂದು ಕಾಡ್ಗಿಚ್ಚಿಗೆ ಬಲಿಯಾಗಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ಬೋನ್ ಇರಿಸಲಾಗಿತ್ತು. ಮದ್ಲೇಹಳ್ಳಿ ಗ್ರಾಮದ ಸರ್ವೇ ನಂಬರ್ 10ರಲ್ಲಿ ನಾರಾಯಣಪ್ಪ ಎಂಬವರ ಜಮೀನಿನಲ್ಲಿ ಚಿರತೆ ಸೆರೆ ಹಿಡಿಯಲು ಅಧಿಕಾರಿಗಳು ಬೋನ್ ಇರಿಸಿದ್ದರು.

ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದ್ದು, ಆದರೆ ಈ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ ಉಂಟಾಗಿದೆ. ಈ ವೇಳೆ ಬೋನಿಗೆ ಬಿದ್ದ ಚಿರತೆ ಹೊರಬರಲಾಗದೆ ಬೆಂಕಿಯಿಂದ ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಚಿರತೆಯು ಬೋನಿಗೆ ಬಿದ್ದಿರುವ ಬಗ್ಗೆ ಇಲಾಖೆಯ ಸಿಬ್ಬಂದಿಗೆ ಮಾಹಿತಿ ಲಭ್ಯವಾಗಿರಲಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಕಿಬ್ಬನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆ.ಬಿ.ಕ್ರಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
2 Comments