LATEST NEWS
ಕೇರಳದಲ್ಲಿ ಕೊರೊನಾ ಸ್ಪೋಟ – ಗಡಿಭಾಗದ ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಆದೇಶ

ಮಂಗಳೂರು ಅಗಸ್ಟ್ 03: ಗಡಿ ರಾಜ್ಯಗಳಲ್ಲಿ ಕೊರೊನಾ ಪ್ರಕರಣ ಏರಿಕೆಯಾಗುತ್ತಿರುವ ಹಿನ್ನಲೆ ಕೇರಳದ ಗಡಿ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಕೇರಳರಾಜ್ಯ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲ ಮದ್ಯದಂಗಡಿಗಳನ್ನು 2021ರ ಆಗಸ್ಟ್ 3 ರಿಂದ 15 ರವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆ ಜಾರಿಗೊಂಡಿರುವ ಸಮಯದಲ್ಲಿ ಆ ವ್ಯಾಪ್ತಿಗೊಳಪಟ್ಟ ವೈನ್‌ಶಾಪ್ ಅಥವಾ ಬಾರ್‌ಗಳ ಮುಂದಿನ ಮತ್ತು ಹಿಂದಿನ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು (ಸೀಲು) ಗಳನ್ನು ಹಾಕಿ ಕಡ್ಡಾಯವಾಗಿ ಮುಚ್ಚುವಂತೆ ನೋಡಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿವೆ. ಮಂಗಳವಾರ ಜಿಲ್ಲೆಯಲ್ಲಿ 307 ಮಂದಿಗೆ ಕೊರೊನಾ ದೃಢಪಟ್ಟಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಮಂಗಳೂರು, ಬಂಟ್ವಾಳದ ತಲಾ ಇಬ್ಬರು, ಬೆಳ್ತಂಗಡಿಯ ಒಬ್ಬರು ಮತ್ತು ಹೊರ ಜಿಲ್ಲೆಯ 4 ಮಂದಿ ಸಾವನ್ನಪ್ಪಿದವರು.