ಕರ್ನಾಟಕದಲ್ಲಿ ಏಪ್ರಿಲ್ 30ರವರೆಗೆ ಲಾಕ್‍ಡೌನ್ ವಿಸ್ತರಣೆ

ಬೆಂಗಳೂರು ಎಪ್ರಿಲ್ 11: ಕೊರೊನಾ ವೈರಸ್ ನಿಯಂತ್ರಿಸುವ ಕ್ರಮವಾಗಿ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಕರ್ನಾಟಕದಲ್ಲಿ ಏಪ್ರಿಲ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ದೇಶದಾದ್ಯಂತ ಹೇರಲಾಗಿರುವ 21 ದಿನಗಳ ಲಾಕ್‍ಡೌನ್ ಏಪ್ರಿಲ್ 14ಕ್ಕೆ ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಂದರ್ಭದಲ್ಲಿ ಲಾಕ್‍ಡೌನ್ ವಿಧಿಸಿದ ಪರಿಣಾಮ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ. ಹೀಗಾಗಿ ಏಪ್ರಿಲ್ 30ರವರೆಗೆ ಲಾಕ್‍ಡೌನ್ ವಿಸ್ತರಿಸಬೇಕೆಂದು ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಮನವಿ ಮಾಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದ ಬಳಿಕ ಯಡಿಯೂರಪ್ಪ ಮಾಧ್ಯಮಗಳ ಜೊತೆ ಮಾತನಾಡಿದರು. ರಾಜ್ಯದಲ್ಲಿನ ಸದ್ಯದ ಸ್ಥಿತಿ, ಸೋಂಕು ನಿವಾರಣೆ ನಿಟ್ಟಿನಲ್ಲಿ ಸಿದ್ಧತೆ ಮತ್ತು ಮುಂದಿನ‌ ನಡೆಯ ಬಗ್ಗೆ ಪ್ರಧಾನಿ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು. ಮುಂದಿನ ಎರಡು ವಾರಗಳ ಲಾಕ್‌ಡೌನ್‌ ಕಳೆದ ಮೂರು ವಾರಗಳಿಗಿಂತ ಭಿನ್ನವಾಗಿರುತ್ತದೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದರು.