ಪುಣೆ ಅಕ್ಟೋಬರ್ 24: ಪೊಲೀಸ್ ಅಧಿಕಾರಿಯೊಬ್ಬ ನಿರಂತರ ಅತ್ಯಾಚಾರ ಮಾಡಿ, ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸರಕಾರಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳಾ ವೈದ್ಯೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಬೀಡ್ ಜಿಲ್ಲೆಯ ಮೂಲದ 32 ವರ್ಷದ ವೈದ್ಯೆ ಗುರುವಾರ ತಡರಾತ್ರಿ ಫಾಲ್ಟನ್ನ ಹೋಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ತನ್ನ ಅಂಗೈಯಲ್ಲಿ ಬರೆದಿಟ್ಟಿರುವ ಆತ್ಮಹತ್ಯೆ ಪತ್ರದಲ್ಲಿ, ಸಬ್ ಇನ್ಸ್ಪೆಕ್ಟರ್ ಗೋಪಾಲ್ ಬದನೆ ಕಳೆದ ಐದು ತಿಂಗಳಿನಿಂದ ತನ್ನ ಮೇಲೆ ಪದೇ ಪದೇ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ. ಅಲ್ಲದೆ ಮತ್ತೊಬ್ಬ ಅಧಿಕಾರಿ ಪ್ರಶಾಂತ್ ಬಂಕರ್ ತನ್ನ ಮೇಲೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
Read More— ಹಾವೇರಿ – ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು
ಪ್ರಕರಣ ಬೆಳಕಿಗೆ ಬಂದ ತಕ್ಷಣ ಸಿಎಂ ದೇವೇಂದ್ರ ಫಡ್ನವೀಸ್ ಅವರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಆತ್ಮಹತ್ಯೆ ಪತ್ರದಲ್ಲಿ ಹೆಸರಿಸಲಾದ ಇಬ್ಬರು ಪೊಲೀಸರನ್ನು ತಕ್ಷಣ ಅಮಾನತುಗೊಳಿಸುವಂತೆ ಆದೇಶಿಸಿದ್ದಾರೆ. ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ಅವರು ಸೂಚನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ (ಸಿಎಮ್ಒ) ಹೇಳಿಕೆಯಲ್ಲಿ ತಿಳಿಸಿದೆ.
ಪ್ರಕರಣ ದಾಖಲಿಸಲಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆತ್ಮಹತ್ಯೆ ಪತ್ರದಲ್ಲಿ ಉಲ್ಲೇಖಿಸಲಾದ ಆರೋಪಗಳ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಸತಾರಾ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.