Connect with us

    KARNATAKA

    ಮಾಲ್​ಗಳು ಓಪನ್, ವೀಕೆಂಡ್​​​ ಕರ್ಫ್ಯೂ ರದ್ದು, ಚಿತ್ರಮಂದಿರಗಳಿಗೆ ಅವಕಾಶವಿಲ್ಲ: ಅನ್​ಲಾಕ್ 3 ಘೋಷಣೆ

    ಬೆಂಗಳೂರು, ಜುಲೈ 03: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಇಳಿಕೆಯಾಗಿರುವ ಬೆನ್ನಲ್ಲೇ ಮೂರನೇ ಹಂತದ ಲಾಕ್‌ಡೌನ್ ಸಡಿಲಿಕೆಯಾಗಿದ್ದು, ವಾರಾಂತ್ಯ ಕರ್ಫ್ಯೂವನ್ನು ತೆಗೆದು ಹಾಕಲಾಗಿದೆ. ಈ ಕುರಿತು ಅಧಿಕಾರಿಗಳು, ತಜ್ಞರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಬಿ.ಎಸ್.​ ಯಡಿಯೂರಪ್ಪ ಈ ವಿಚಾರವನ್ನು ತಿಳಿಸಿದ್ದಾರೆ.

    ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಜುಲೈ 5ರಂದು ಬೆಳಗ್ಗೆ 5ಗಂಟೆಯಿಂದ ಜು. 19 ಬೆಳಗ್ಗೆ 5 ರವರೆಗೆ ಜಾರಿಗೆ ಬರುವಂತೆ ಲಾಕ್‌ಡೌನ್ ನಿರ್ಬಂಧಗಳ ಸಡಿಲಿಕೆ ಮಾಡಲಾಗಿದೆ.

    1. ಸರ್ಕಾರಿ/ಖಾಸಗಿ ಕಚೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

    2. ಮಾಲ್‌ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

    3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.

    4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.

    5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

    6. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

    7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

    8. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.

    9. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.

    10. ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.

    11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.

    12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.

    13. ಪಬ್‌ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್‌ಗಳಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

    14. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.

    ಜಿಲ್ಲೆಯಲ್ಲಿರುವ ಪರಿಸ್ಥಿತಿಗೆ ಅನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಲಾಗಿದೆ.

    ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ವಿನಂತಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply