LATEST NEWS
ಮಲ್ಪೆ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ – ಪ್ರಕರಣದ ಅಸಲಿ ಕಥೆ ಬಿಚ್ಚಿಟ್ಟ ಪೊಲೀಸರು

ಉಡುಪಿ ಎಪ್ರಿಲ್ 16: ಮಲ್ಪೆ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮಗುವಿನ ತಾಯಿಯನ್ನು ಪತ್ತೆ ಹಚ್ಚಿದ್ದು, ತಾಯಿಯ ವಿರುದ್ದ ಕಾನೂನು ರೀತಿ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಮಲ್ಪೆ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಮಲ್ಪೆ ಜಂಕ್ಷನ್‌ನಲ್ಲಿರುವ ಜಾಮೀಯ ಮಸೀದಿಯ ಬಳಿಯ ಮಸೀದಿಗೆ ಸಂಬಂಧಿಸಿದ ಕಟ್ಟಡದಲ್ಲಿರುವ ಶೌಚಾಲಯದಲ್ಲಿ ಎಪ್ರಿಲ್ 14ರಂದು ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದ್ದು, ಶೌಚಾಲಯದ ಒಳಗಿನ ಗೋಡೆಯ ಮೇಲೆ ರಕ್ತದ ಕಲೆಗಳು ಇರುವುದು ಕಂಡು ಬಂದಿತ್ತು. ಈ ಬಗ್ಗೆ ಮಸೀದಿ ವತಿಯಿಂದ ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ಕೈಗೊಳ್ಳಲಾಗಿದ್ದು, ಪ್ರಥಮವಾಗಿ ಈ ಮಗು ಸ್ಥಳೀಯರಾಗಿರುವ ಆಫ್ರಿನಾ ಎಂಬವರದ್ದು ಎಂಬುದು ತಿಳಿದುಬಂದಿದೆ. ಈಗಾಗಲೇ ಅವರಿಗೆ ಒಂದು ಮಗು ಇದ್ದು, ಇನ್ನೊಂದು 7-8 ತಿಂಗಳ ಗರ್ಭವನ್ನು, ಗರ್ಭಪಾತ ಮಾಡಿಸಿಕೊಳ್ಳಲು ಯಾವುದೇ ವೈದ್ಯಕೀಯ ನೆರವನ್ನು ಪಡೆದು ಕೊಳ್ಳದೆ, ಇವರೇ ಸ್ವತಹ ಪ್ರಯತ್ನಿಸಿದ್ದರು. ಈ ಬಗ್ಗೆ ತೀರ ಹೊಟ್ಟೆ ನೋವಿನಿಂದ ಬಳಲಿ ಮಲ್ಪೆ ಮಸೀದಿ ಕಟ್ಟಡದಲ್ಲಿರುವ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ್ದರು ಎಂದು ಎಸ್ಪಿ ಡಾ.ಅರುಣ್ ತಿಳಿಸಿದ್ದಾರೆ.
ಬಳಿಕ ಆಕೆ ಮಗುವನ್ನು ಅಲ್ಲಿಯೇ ಬಿಟ್ಟು ತೆರಳಿರುವುದಾಗಿ ಅವರ ಸ್ವಇಚ್ಛಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪ್ರಸ್ತುತ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ನಂತರ ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಮಗು ಬೇರೆಯವರದ್ದೆಂದು ಹೇಳುವ ಕೆಲವೊಂದು ಅನುಮಾನಾಸ್ಪದ ಆಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ರೀತಿ ಯಾರೂ ಕೂಡ ಸುಳ್ಳು ಸುದ್ದಿಗಳನ್ನು ಹಬ್ಬಿಸಬಾರದು. ಈ ರೀತಿಯಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದ್ದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.