Connect with us

LATEST NEWS

ಮಲ್ಪೆ ಪ್ರಕರಣ – ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ – ಸಿಎಂ ಸಿದ್ದರಾಮಯ್ಯ

ಉಡುಪಿ ಮಾರ್ಚ್ 19 : ಮೀನು ಕದ್ದಿದ್ದಾರೆ ಎಂಬ ಆರೋಪದಲ್ಲಿ ಮಲ್ಪೆ ಮೀನು ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಗರಂ ಆಗಿದ್ದು, ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಸಿಎಂ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ, ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ. ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ,


ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ. ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕಾರ್ಮಿಕ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಕರಣ ಸಂಬಂಧಿಸಿ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ವಿಜಯನಗರ ಜಿಲ್ಲೆಯ ಮೂಲದ ಮಹಿಳೆಯೊಬ್ಬರು ಬಂದರಿನಲ್ಲಿ ಬೋಟ್ ನಿಂದ ಮೀನು ಕದ್ದಿದ್ದಾರೆ ಎಂದು ಆರೋಪಿಸಿ ಸ್ಥಳೀಯರಾದ ಲಕ್ಷ್ಮೀ ಬಾಯಿ ಮತ್ತಿತರರು ಆಕೆಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ್ದರು. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಹಲ್ಲೆಗೊಳಗಾದ ಮಹಿಳೆ ಮಾ.18ರಂದು ಮಲ್ಪೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಂಧಿತರನ್ನು ಸ್ಥಳೀಯರಾದ ಲಕ್ಷ್ಮೀಬಾಯಿ, ಸುಂದರ್, ಶಿಲ್ಪಾ ಹಾಗೂ ಇನ್ನೋರ್ವ ವ್ಯಕ್ತಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ವಿಡಿಯೋದಲ್ಲಿರುವ ಉಳಿದ ಆರೋಪಿಗಳ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಹಿಳೆ ಬಂದರಿನಲ್ಲಿ ಮೀನು ಕದ್ದಿದ್ದಾರೆಂದು ಆರೋಪಿಸಿ ಲಕ್ಷ್ಮೀಬಾಯಿ ಎಂಬವರು ಹಲ್ಲೆ ನಡೆಸಿದ್ದು ನಂತರ ಸ್ಥಳೀಯರು ಕಲೆಯೊಂದಿಗೆ ಸೇರಿ, ಆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದರು. ಘಟನೆ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ಡಾ.ಕೆ.ಅರಣ್ ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *