DAKSHINA KANNADA
ಕ್ಯಾಂಪ್ಕೋಗೆ ವಂಚನೆ ಪ್ರಕರಣ – ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗೆ ನ್ಯಾಯಾಂಗ ಬಂಧನ.
ಪುತ್ತೂರು ಮಾರ್ಚ್ 15 : ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಗೆ ಕೊಕ್ಕೋ ಬೀಜ ಸರಬರಾಜು ವ್ಯವಹಾರದಲ್ಲಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬಂಟ್ವಾಳ ತಾಲೂಕಿನ ಶಂಭೂರು ಎಂಬಲ್ಲಿರುವ ಕೋಸ್ಪಾಕ್ ಏಶಿಯಾ ಇಂಟರ್‌ನ್ಯಾಷನಲ್ ಕಂಪೆನಿ ಲಿ.ಎಂಬ ಕೊಕ್ಕೋ ಸರಬರಾಜು ಸಂಸ್ಥೆಯೊಂದಿಗೆ ಪಾಲುದಾರಿಕೆಯನ್ನು ಹೊಂದಿರುವ ಬಂಟ್ವಾಳ ಶಂಭೂರು ಪಿಂಟೋ ಕಾಟೇಜ್ ನಿವಾಸಿ ವಿನ್ಸಿ ಪಿಂಟೋ ಎಂಬವರನ್ನು ಪ್ರಕರಣದ ಆರೋಪಿಯಾಗಿ ಬಂಧಿಸಲಾಗಿತ್ತು.
ಮುಂಬೈ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.ಆರೋಪಿಯನ್ನು ಪುತ್ತೂರಿಗೆ ಕರೆ ತಂದು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಂದರ್ಭ ಆರೋಗ್ಯದಲ್ಲಿ ಏರುಪೇರುಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿಂದ ಚೇತರಿಕೆಯಾದ ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು ಪ್ರಕರಣದ ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ನ್ಯಾಯಾಲಯ ಆರೋಪಿಯನ್ನು 4 ದಿನಗಳ ಅವಧಿಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿತ್ತು.ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಮಾ.14ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.