LATEST NEWS
ನಾಳೆ ಮಂಗಳೂರು ಮಹಾನಗರಪಾಲಿಕೆ ಚುನಾವಣೆ ಫಲಿತಾಂಶ… ಮತ ಎಣಿಕೆಗೆ ಸಿದ್ದತೆ ಪೂರ್ಣ
ನಾಳೆ ಮಂಗಳೂರು ಮಹಾನಗರಪಾಲಿಕೆ ಚುನಾವಣೆ ಫಲಿತಾಂಶ… ಮತ ಎಣಿಕೆಗೆ ಸಿದ್ದತೆ ಪೂರ್ಣ
ಮಂಗಳೂರು ನವೆಂಬರ್ 13: ಮಂಗಳೂರು ಮಹಾನಗರಪಾಲಿಕೆ ಚುನಾವಣಾ ಮತ ಎಣಿಕೆ ಗುರುವಾರ ನಡೆಯಲಿದ್ದು, ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ನಗರದ ರೊಸಾರಿಯೋ ಶಾಲೆಯಲ್ಲಿ ಮತ ಎಣಿಕೆ ನಡೆಯಲಿದೆ. ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ.
ನಗರದ ರೊಸಾರಿಯೋ ಶಾಲೆಯಲ್ಲಿ ಮತ ಎಣಿಕೆ ನಡೆಯಲಿದ್ದು, ಬುಧವಾರ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದರು. ತಲಾ 5 ವಾರ್ಡ್‍ಗೆ ಒಬ್ಬರಂತೆ ಒಟ್ಟು 12 ಚುನಾವಣಾಧಿಕಾರಿಗಳು 12 ಕೊಠಡಿಗಳಲ್ಲಿ ಮತ ಎಣಿಕೆ ನಡೆಸಲಿದ್ದಾರೆ. ಆಯಾ ಚುನಾವಣಾಧಿಕಾರಿಗಳು ಪ್ರತಿಯೊಂದು ವಾರ್ಡ್ ಮತ ಎಣಿಕೆ ಪೂರ್ಣಗೊಂಡ ನಂತರ ಇನ್ನೊಂದು ವಾರ್ಡ್‍ನ ಮತ ಎಣಿಕೆ ಕೈಗೊಳ್ಳಲಿದ್ದಾರೆ. ಒಂದು ಸುತ್ತಿನಲ್ಲಿ 4 ಮತಗಟ್ಟೆಗಳ ಮತ ಎಣಿಕೆ ನಡೆಯಲಿದೆ.
ಮತ ಎಣಿಕೆ ಕೇಂದ್ರ ಸುತ್ತಮುತ್ತ ತೀವ್ರ ಭದ್ರತೆ ಕೈಗೊಳ್ಳಲಾಗಿದೆ. ಬುಧವಾರ ಡಿಸಿಪಿ ಅರುಣಾಂಶು ಗಿರಿ ಅವರ ನೇತೃತ್ವದಲ್ಲಿ ಭದ್ರತಾ ರಿಹರ್ಸಲ್ ನಡೆಯಿತು.
ನಿಷೇಧಾಜ್ಞೆ : ಮತ ಎಣಿಕೆ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ರೀತಿಯ ಧಕ್ಕೆ ಬರುವಂತಹ ಘಟನೆಗಳು ನಡೆಯದಂತೆ ತಡೆಗಟ್ಟುವ ಉದ್ದೇಶದಿಂದ ನವೆಂಬರ್ 14 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪಾಂಡೇಶ್ವರ ರೋಸಾರಿಯೋ ಶಾಲೆಯ ಮತ ಎಣಿಕೆ ಕೇಂದ್ರದ ಸುತ್ತ ಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆಯ ಕಲಂ : 144 ರ ಅನ್ವಯ ನಿರ್ಬಂಧಕ ಆಜ್ಞೆಯನ್ನು ವಿಧಿಸಿ ಮಂಗಳೂರು ಪೊಲೀಸು ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಡಾ. ಹರ್ಷಾ ಪಿ.ಎಸ್. ಆದೇಶಿಸಿರುತ್ತಾರೆ.