Connect with us

DAKSHINA KANNADA

ಉದ್ಯಮಿ ಧಾರ್ಮಿಕ ಮುಂದಾಳು ಮುಮ್ತಾಝ್ ಅಲಿ ನಾಪತ್ತೆ ಪ್ರಕರಣಕ್ಕೆ ಹನಿಟ್ರಾಪ್ ವಾಸನೆ , ಮಹಿಳೆ ಸೇರಿ 6 ಮಂದಿ ಮೇಲೆ FIR…!

ಮಂಗಳೂರು : ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು ಹನಿಟ್ರಾಪ್ ನ ವಾಸನೆ ಹೊಡೆಯಲಾರಂಭಿಸಿದೆ.

ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸಹೋದರ ,ಉದ್ಯಮಿ  ಸಾಮಾಜಿಕ  ಧಾರ್ಮಿಕ ಮುಂದಾಳು  ಮುಮ್ತಾಝ್ ಅಲಿ ಅವರ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.  ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ ವಿಡಿಯೋ ಮೂಲಕ ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿದ ಆರೋಪದಲ್ಲಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಮಂಗಳೂರಿನ  ಕಾವೂರು ಪೊಲೀಸ್ ಠಾಣೆಯಲ್ಲಿ FIR ದಾಖಲು  ಮಾಡಲಾಗಿದೆ.  ಮುಮ್ತಾಝ್ ಅಲಿ ಅವರು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತಪಡಿಸಿ ಅವರ ಸಹೋದರ ಹೈದರ್ ಅಲಿ ಎಂಬವರು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಹಿಳೆಯನ್ನು ಬಳಸಿಕೊಂಡು ದುರುದ್ದೇಶದಿಂದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿಲಾಗಿದೆ.  ರೆಹಮತ್ , ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶುಐಬ್, ಸತ್ತಾರ್ ಅವರ ಕಾರು ಚಾಲಕ ಸಿರಾಜ್ ಎಂಬವರ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನನ್ನ ಸಹೋದರ ಮುಮ್ತಾಝ್ ಅಲಿ ಸಮಾಜದಲ್ಲಿ ಅತ್ಯಂತ ಗೌರವಾನ್ವಿತ ವ್ಯಕ್ತಿಯಾಗಿದ್ದು, ಕಳೆದ 30 ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿದ್ದರು. ಸಮಾಜ ಸೇವೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಹಲವು ಧಾರ್ಮಿಕ ಸಂಸ್ಥೆಗಳ ಮುಖ್ಯಸ್ಥರಾಗಿದ್ದು, ಅವರ ಪ್ರಸಿದ್ಧಿಯನ್ನು ಹಾಳು ಮಾಡುವ ಉದ್ದೇಶದಿಂದ ಆರೋಪಿಗಳೆಲ್ಲರೂ ಸೇರಿಕೊಂಡು ಅವರು ಆತ್ಮಹತ್ಯೆಗೆ ಶರಣಾಗುವಂತೆ ಪ್ರಚೋದನೆ ನೀಡಿದ್ದಾರೆ ಎಂದು ಹೈದರ್ ಅಲಿ ದೂರಿನಲ್ಲಿ ಉಲ್ಲೇಖಸಿದ್ದಾರೆ. ಆರೋಪಿಗಳ ಪೈಕಿ ರೆಹಮತ್ ಎಂಬವರು ಅಕ್ರಮ ಸಂಬಂಧ ಇದೆ ಎಂದು ಸುಳ್ಳು ಪ್ರಚಾರ ಮಾಡಿ ಹೆಸರನ್ನು ಹಾಳು ಮಾಡುತ್ತೇನೆ ಎಂದು ಹೆದರಿಸಿ 2024 ರ ಜುಲೈ ಯಿಂದ ಇದುವರೆಗೂ 50 ಲಕ್ಷ ರೂ.ಗಿಂತಲು ಅಧಿಕ ಮೊತ್ತವನ್ನು ವಸೂಲಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಬೆದರಿಸಿ 25 ಲಕ್ಷ ರೂ. ಹಣವನ್ನು ಚೆಕ್ ಮೂಲಕ ಪಡೆದುಕೊಂಡಿದ್ದಾರೆ ಎಂದು ಹೈದರ್ ಅಲಿ ಅವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಗಳು ಈ ಮೊದಲು ಮುಮ್ತಾಝ್ ಅಲಿಯವರಿಗೆ ದೈಹಿಕವಾಗಿ ಹಲ್ಲೆ ಮಾಡಿರುವ ಬಗ್ಗೆಯೂ ದೂರಿನಲ್ಲಿ ತಿಳಿಸಿರುವ ಅವರು, ಸತ್ತಾರ್ ಎಂಬಾತ ಮುಮ್ತಾಝ್ ಅಲಿ ಅವರ ರಾಜಕೀಯ ವಿರೋಧಿಯಾಗಿದ್ದು, ಅವರನ್ನು ರಾಜಕೀಯವಾಗಿಯೂ ಮುಗಿಸಬೇಕೆಂದು ರೆಹಮತ್ ಅವರೊಂದಿಗೆ ಸೇರಿಕೊಂಡು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ದೂರಲಾಗಿದೆ. ರೆಹಮತ್ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಇದೆ ಎಂದು ಪ್ರಚಾರ ಮಾಡುವುದಾಗಿ ಬೆದರಿಸಿ, ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಾ, ನಿರಂತರ ಕಿರುಕುಳ ನೀಡಿ ಹಣವನ್ನು ನೀಡದಿದ್ದರೆ ಕೊಲೆ ಮಾಡುವುದಾಗಿ ಆರೋಪಿಗಳು ಹೆದರಿಸಿದ್ದರು. ಕುಟುಂಬದ ಸದಸ್ಯರಿಗೂ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ರವಿವಾರ ಬೆಳಗ್ಗಿನ ಜಾವದಿಂದ ನಾಪತ್ತೆಯಾಗಿ ಮುಮ್ತಾಝ್ ಅಲಿ ಅವರಿಗಾಗಿ ಕೂಳೂರು ನದಿ, ಅರಬ್ಬೀ ಸಮುದ್ರದಲ್ಲಿ ಕೋಸ್ಟ್ ಗಾರ್ಡ್ ನೆರವಿನಲ್ಲಿ ಸ್ಥಳೀಯಾಡಳಿತ ಶೋಧ ಕಾರ್ಯ ಮುಂದುವರೆಸಿದೆ. ಅಲಿ ಅವರ ಕಾರು ಉಡುಪಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೂಳೂರು ಸೇತುವೆಯಲ್ಲಿ ಅಪಘಾತವಾದ ಸ್ಥತಿಯಲ್ಲಿ ಪತ್ತೆಯಾಗಿತ್ತು.

also Read

 

ಕಣ್ಮರೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಪತ್ತೆ…!!

Share Information
Continue Reading
Advertisement
Click to comment

Leave a Reply

Your email address will not be published. Required fields are marked *