ಮಂಗಳೂರು ಮಾರ್ಚ್ 19: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಜನವಿರೋಧಿ ನೀತಿಗಳು ಜಾರಿಯಲ್ಲಿವೆ ಎಂದು ಆರೋಪಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮತ್ತು ಉತ್ತರ ಮಂಡಲದ ವತಿಯಿಂದ ಬುಧವಾರ ಪಾಲಿಕೆಯ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, “ಕಳೆದ ಒಂದು ವರ್ಷದಿಂದ ಪಾಲಿಕೆಯು ಆಡಳಿತಾಧಿಕಾರಿಯವರ ಕೈಯಲ್ಲಿದ್ದು, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವವರೇ ಇಲ್ಲದಂತಾಗಿದೆ. ಇ-ಖಾತಾ ವಿಳಂಬ, ಕುಡಿಯುವ ನೀರಿನ ಸಮಸ್ಯೆ ಮತ್ತು ಅವೈಜ್ಞಾನಿಕ ತೆರಿಗೆ ಪದ್ಧತಿಯಿಂದಾಗಿ ನಗರದ ಜನತೆ ತತ್ತರಿಸುತ್ತಿದ್ದಾರೆ. ಚುನಾವಣೆ ನಡೆಸಿದರೆ ತಮಗೆ ಸೋಲಾಗಬಹುದು ಎಂಬ ಭೀತಿಯಿಂದ ರಾಜ್ಯ ಸರ್ಕಾರ ಪಾಲಿಕೆ ಚುನಾವಣೆಯನ್ನು ಮುಂದೂಡುತ್ತಿದೆ” ಎಂದು ಕಿಡಿಕಾರಿದರು.
ನಗರದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಪಾಲಿಕೆಯ ಅವ್ಯವಸ್ಥೆಯಿಂದಾಗಿ ಜನ ಬೀದಿಗಿಳಿಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ವಿಧಾನಪರಿಷತ್ ಮಾಜಿ ಸದಸ್ಯ ಕೆ. ಮೋನಪ್ಪ ಭಂಡಾರಿ, ಮಾಜಿ ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೂಡಲೇ ಚುನಾವಣೆ ನಡೆಸಿ ಜನಪ್ರತಿನಿಧಿಗಳ ಆಡಳಿತಕ್ಕೆ ಅವಕಾಶ ನೀಡಬೇಕು ಎಂದು ಈ ಸಂದರ್ಭದಲ್ಲಿ ಆಗ್ರಹಿಸಲಾಯಿತು