DAKSHINA KANNADA
ಪುತ್ತೂರು : ತಾಳಿ ಕಟ್ಟುವ ಶುಭ ವೇಳೆ ಮದುವೆ ನಿರಾಕರಿಸಿದ ವಧುವಿನಿಂದ ಮುರಿದು ಬಿತ್ತು ಮದುವೆ…!
ಪು್ತ್ತೂರು : ವಿವಾಹ ಸಮಾರಂಭದಲ್ಲಿ ಕೊನೇ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿ ಮದುವೆ ಮುರಿದು ಬಿದ್ದ ಘಟನೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಕೊಣಾಲು ಗ್ರಾಮದ ಉಮೇಶ ಅವರ ವಿವಾಹ ಬಂಟ್ವಾಳ ತಾಲೂಕು ಕುಳದ ಸರಸ್ವತಿ ಅವರೊಂದಿಗೆ ನಿಗದಿಯಾಗಿತ್ತು. ಬೆಳಗ್ಗೆ 11.35ರ ಮುಹೂರ್ತದಲ್ಲಿ ಕಾಂಚನ ಪೆರ್ಲದ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ವಿವಾಹ ನಿಗದಿಯಾಗಿದ್ದು. ವರ ಹಾಗೂ ವಧುವಿನ ಕಡೆಯವರು ದೇವಸ್ಥಾನಕ್ಕೆ ಮದುವೆ ದಿಬ್ಬಣದಲ್ಲಿ ಬಂದಿದ್ದರು. ಮದುವೆ ವಿಧಿಗಳು ನಡೆದು ವಧು – ವರ ಉಮೇಶ ಹೂಮಾಲೆ ಹಾಕಿಸಿಕೊಂಡಿದ್ದರು. ಇನ್ನು ವರ ಉಮೇಶ ತಾಳಿ ಕಟ್ಟಲು ಮುಂದಾಗುತ್ತಿದ್ದಂತೆ ವಧು ಸರಸ್ವತಿ ಈ ಮದುವೆ ನನಗೆ ಇಷ್ಟ ಇಲ್ಲ ಎಂದು ಹೇಳಿ ತಾಳಿ ಕಟ್ಟಲು ಅವಕಾಶ ನೀಡಲಿಲ್ಲ. ಇದರಿಂದ ಎರಡೂ ಕಡೆಯವರೂ ವಿಚಲಿತಗೊಂಡು ಈ ವೇಳೆ ಹಿರಿಯರು ವಧುವಿನ ಮನವೊಲಿಕೆಗೆ ಮುಂದಾದರೂ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿರುವುದರಿಂದ ಬಳಿಕ ಎರಡೂ ಕಡೆಯವರೂ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದರು. ಪೊಲೀಸ್ ಠಾಣೆಯಲ್ಲಿ ನಡೆದ ಮಾತುಕತೆ ವೇಳೆ ವಧು ಸರಸ್ವತಿ ಆಗಿರುವ ಅಚಾತುರ್ಯಕ್ಕೆ ಪಶ್ಚಾತ್ತಾಪ ಪಟ್ಟು ಉಮೇಶ ಅವರನ್ನು ಮದುವೆಯಾಗಲು ಒಪ್ಪಿಗೆ ಸೂಚಿಸಿದರು. ಆದರೆ ಆಗ ವರ ಉಮೇಶ್ ಅವರು ಮದುವೆಯಾಗಲು ನಿರಾಕರಿಸಿದರು. ಇದರಿಂದಾಗಿ ಎರಡೂ ಕಡೆಯವರು ಠಾಣೆಯಲ್ಲಿ ಮುಚ್ಚಳಿಕೆ ಬರೆಯಿಸಿಕೊಂಡು ತಮ್ಮ ತಮ್ಮ ಮನೆಗಳಿಗೆ ತೆರಳಿದರು.