FILM
ಆತ್ಮಹತ್ಯೆಗೆ ಶರಣಾದ ಮಠ ಎದ್ದೇಳು ಮಂಜುನಾಥ ಚಿತ್ರದ ನಿರ್ದೇಶಕ ಗುರುಪ್ರಸಾದ್
ಬೆಂಗಳೂರು ನವೆಂಬರ್ 03: ಕನ್ನಡದ ಖ್ಯಾತ ನಟ ನಿರ್ದೇಶಕ ಗುರುಪ್ರಸಾದ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಫ್ಯಾನಿಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಗ್ಗೇಶ್ ಅಭಿನಯದ ಮಠ, ಎದ್ದೇಳು ಮಂಜುನಾಥ ಸೇರಿದಂತೆ ಹಲವು ಚಿತ್ರಗಳ ನಿರ್ದೇಶಿಸಿದ್ದ ಅವರು ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದರು. 3 ದಿನಗಳ ಹಿಂದೆ ನೇಣಿಗೆ ಶರಣಾಗಿದ್ದು, ಅವರ ಮೃತದೇಹ ಅಪಾರ್ಟ್‌ಮೆಂಟ್ ಪ್ಲಾಟ್ ಪತ್ತೆಯಾಗಿದೆ.
ಇನ್ನೂ ನವೆಂಬರ್ 2ರಂದು ಗುರುಪ್ರಸಾದ್ ಹುಟ್ಟುಹಬ್ಬ. ಈ ಬೆನ್ನಲ್ಲೇ ಅವರ ಸಾವಿನ ಸುದ್ದಿ ಚಿತ್ರರಂಗದ ಮಂದಿಗೆ ಶಾಕ್ ಕೊಟ್ಟಿದೆ. ಮೂರು ದಿನಗಳ ಹಿಂದೆ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆಯಿಂದ ಸ್ಥಳೀಯ ನಿವಾಸಿಗಳಿಗೆ ವಾಸನೆ ಬರತೊಡಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಬಾಗಿಲನ್ನು ತೆರೆಯಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಈಗ ಲಭ್ಯವಾಗಿದೆ.
ಗುರುಪ್ರಸಾದ್ ಅವರು ಸಾಲದ ಬಾಧೆಯಿಂದ ಬಳಲುತ್ತಿದ್ದರು. ಅವರು ನಿರ್ದೇಶನ ಮಾಡಿದ್ದ ಇತ್ತೀಚೆಗಿನ ಸಿನಿಮಾ ‘ರಂಗನಾಯಕ’ ಹೀನಾಯ ಸೋಲು ಕಂಡಿತ್ತು. ‘ರಂಗನಾಯಕ’ ಸಿನಿಮಾದ ಫ್ಲಾಪ್ ಬಳಿಕ ಗುರುಪ್ರಸಾದ್ ಸಾಲಗಳಿಗೆ ಸಿಲುಕಿದ್ದರು. ಮಾತ್ರವಲ್ಲದೆ ಕೆಲ ತಿಂಗಳ ಹಿಂದೆ ಗುರುಪ್ರಸಾದ್ ಎರಡನೇ ಮದುವೆ ಸಹ ಆಗಿದ್ದರು ಎನ್ನಲಾಗುತ್ತಿದೆ. ಇದೀಗ ಏಕಾ-ಏಕಿ ನೇಣಿಗೆ ಕೊರಳೊಡ್ಡಿದ್ದಾರೆ.
ಗುರುಪ್ರಸಾದ್ ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರು. ‘ಮಠ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಗುರುಪ್ರಸಾದ್ ಮೊದಲ ಸಿನಿಮಾಕ್ಕೆ ರಾಜ್ಯ ಪ್ರಶಸ್ತಿ ಪಡೆದಿದ್ದರು. ಅದಾದ ಬಳಿಕ ನಿರ್ದೇಶಿಸಿದ ‘ಎದ್ದೇಳು ಮಂಜುನಾಥ’ ಭಾರಿ ದೊಡ್ಡ ಹಿಟ್ ಆಯ್ತು, ಕಲ್ಟ್ ಕಾಮಿಡಿ ಸಿನಿಮಾ ಆಗಿ ಗುರುತಿಸಲಾಗುತ್ತಿದೆ. ಅದಾದ ಬಳಿಕ ‘ಡೈರೆಕ್ಟರ್ಸ್ ಸ್ಪೆಷಲ್’ ಸಿನಿಮಾ ಮಾಡಿದರು. ಈ ಸಿನಿಮಾ ಮೂಲಕ ಡಾಲಿ ಧನಂಜಯ್ ನಾಯಕನಾಗಿ ಪರಿಚಯಗೊಂಡರು. ಅದಾದ ಬಳಿಕ 2017 ರಲ್ಲಿ ‘ಎರಡನೇ ಸಲ’ ನಿರ್ದೇಶಿಸಿದರು. ಆ ಸಿನಿಮಾ ಸಾಧಾರಣ ಯಶಸ್ಸನ್ನಷ್ಟೆ ಕಂಡಿತು.
‘ಎರಡನೇ ಸಲ’ ಸಿನಿಮಾ ಆದಮೇಲೆ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದ ಗುರುಪ್ರಸಾದ್ ಇದೇ ವರ್ಷದಲ್ಲಿ ಜಗ್ಗೇಶ್ ಅವರೊಟ್ಟಿಗೆ ‘ರಂಗನಾಯಕ’ ಸಿನಿಮಾ ಮಾಡಿದರು. ಸಿನಿಮಾ ಚಿತ್ರಮಂದಿರದಲ್ಲಿ ಅಟ್ಟರ್ ಫ್ಲಾಪ್ ಆಯ್ತು. ‘ರಂಗನಾಯಕ’ ಸಿನಿಮಾದ ಸೋಲಿನಿಂದ ವಿಚಲಿತರಾಗಿದ್ದ ಗುರುಪ್ರಸಾದ್ ಸಾಕಷ್ಟು ಸಾಲಗಳಿಗೆ ಸಿಲುಕಿಕೊಂಡಿದ್ದರು. ಕೊನೆಗೆ ಈಗ ನಿಧನ ಹೊಂದಿದ್ದಾರೆ. ಕೌಟುಂಬಿಕ ಕಲಹಗಳ ಕಾರಣದಿಂದಾಗಿ ಗುರುಪ್ರಸಾದ್ ಅವರ ಮೊದಲ ಮದುವೆ ಮುರಿದು ಬಿದ್ದಿತ್ತು, ಕೆಲ ತಿಂಗಳ ಹಿಂದಷ್ಟೆ ಅವರು ಎರಡನೇ ಮದುವೆ ಆಗಿದ್ದರು.