KARNATAKA
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಈಶ್ವರಪ್ಪ ಘೋಷಣೆ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಅವರ ಹೆಸರು ಕೇಳಿ ಬಂದ ಹಿನ್ನಲೆ ಇದೀಗ ವಿಪಕ್ಷಗಳ ಪ್ರತಿಭಟನೆ ಹಾಗೂ ಹೈಕಮಾಂಡ್ ಸೂಚನೆ ಮೇರೆಗೆ ಕೊನೆಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಉಡುಪಿ ಲಾಡ್ಜ್ ಒಂದರಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದು, ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ ಎಂದು ವಾಟ್ಸಪ್ ಸಂದೇಶ ಕಳುಹಿಸಿದ್ದರು. ಈ ಹಿನ್ನಲೆ ವಿಪಕ್ಷ ಕಾಂಗ್ರೇಸ್ ಹಾಗೂ ಜೆಡಿಎಸ್ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದವು.

ಆದರೆ ಈಶ್ವರಪ್ಪ ಮಾತ್ರ ಗುತ್ತಿಗೆದಾರ ಸಂತೋಷ್ ಪಾಟೀಲ್ ಯಾರೆಂದು ನನಗೆ ಗೊತ್ತೇ ಇಲ್ಲ. ಸುಖಾಸುಮ್ಮನೆ ನನ್ನ ಮೇಲೆ ಆರೋಪ ಮಾಡಲಾಗಿದೆ. ಸಂತೋಷ್ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ನಿನ್ನೆ ಖಡಕ್ ಆಗಿ ಹೇಳಿದ್ದರು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ಇಂದು ಸಂಜೆ ತುರ್ತು ಪತ್ರಿಕಾ ಗೋಷ್ಠಿ ನಡೆಸಿ ಶುಕ್ರವಾರ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.