Connect with us

    LATEST NEWS

    ಉಡುಪಿ ಜಿಲ್ಲೆಯಲ್ಲಿ ಅಧಿಕಾರಿಗಳ ಅಶಿಸ್ತು, ವಿಳಂಬ ಸಹಿಸುವುದಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

    ಉಡುಪಿ, ಜೂನ್ 11 : ಜಿಲ್ಲೆಯ ಯಾವುದೇ ಇಲಾಖೆಯಲ್ಲಿ ಸರಕಾರದ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಹಾಗೂ ಆಶಿಸ್ತು ಕಂಡುಬಂದಲ್ಲಿ ಅಂತಹ ಅಧಿಕಾರಿಗಳು ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದರು. ಉಡುಪಿಯ ತಾಲೂಕು ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿದರು.


    ರಾಜ್ಯದಲ್ಲಿ ಪ್ರಸ್ತುತ ನೂತನ ಸರ್ಕಾರ ಜಾರಿಗೆ ಬಂದಿದೆ, ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನ ಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಸರಕಾರಕ್ಕೆ ಒಳ್ಳೆಯ ಹೆಸರು ತರುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಈ ಕಾರ್ಯದಲ್ಲಿ ಅನಗತ್ಯ ವಿಳಂಬ ಹಾಗೂ ಅಶಿಸ್ತು ತೋರಿದಲ್ಲಿ ಅಂತಹ ಅಧಿಕಾರಿಗಳ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಸೂಚನೆ ನೀಡಿದರು. ಸರ್ಕಾರದ ಪ್ರಮುಖ ಯೋಜನೆಗಳಾದ ಅನ್ನಬಾಗ್ಯ, ಗೃಹಲಕ್ಷಿö್ಮ, ಗೃಹಜ್ಯೋತಿ, ಯುವನಿಧಿ ಹಾಗೂ ಶಕ್ತಿ ಯೋಜನೆಗಳ ಸಮರ್ಪಕವಾಗಿ ಅನುಷ್ಠಾನ ಮಾಡಲು ಜಿಲ್ಲೆಯಲ್ಲಿ ಅರ್ಹರಿರುವ ಫಲಾನುಭವಿಗಳ ಸಂಖ್ಯೆ, ಹಾಗೂ ಯೋಜನೆಯನ್ನು ಅವರಿಗೆ ತಲುಪಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಗತ್ಯ ವಿವರಗಳನ್ನು ಸಿದ್ದಪಡಿಸಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


    ಜಿಲ್ಲೆಯಲ್ಲಿ ಅಧಿಕಾರಿಗಳು ಜನಪರವಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದ ಅವರು, ಯಾವುದೇ ಸಂದರ್ಭದಲ್ಲಿ ಅಧಿಕಾರಿಗಳು ಮೊಬೈಲ್ ನ್ನು ಸ್ವಿಚ್ ಆಫ್ ಮಾಡದೇ , ಕೇಂದ್ರಸ್ಥಾನದಲ್ಲೇ ಇದ್ದು, ಅಗತ್ಯ ಸಂದರ್ಭದಲ್ಲಿ ತಕ್ಷಣವೇ ಸಂಪರ್ಕಕ್ಕೆ ಸಿಗುವಂತಿರಬೇಕು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಾಗ ಅನಗತ್ಯ ವಿಳಂಬ ಹಾಗೂ ಅರ್ಜಿಗಳನ್ನು ಸಕಾರಣವಿಲ್ಲದೇ ತಿರಸ್ಕರಿಸಿದೇ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹರಿಗೆ ಸೌಲಭ್ಯಗಳನ್ನು ಮಂಜೂರು ಮಾಡುವಂತೆ ತಿಳಿಸಿದರು.
    ಪ್ರಸ್ತುತ ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆ, ಪ್ರಾಕೃತಿಕ ವಿಕೋಪ ಎದುರಿಸಲು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು, ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಸಿದ್ದತೆಗಳು, ಸಮುದ್ರ ಕೊರೆತ ತಡೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸಂಬAದಪಟ್ಟ ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದ ಸಚಿವರು, ಮಳೆಗಾಲದಲ್ಲಿ ಶಾಲಾ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡುವಂತೆ ಹಾಗೂ ಕಾಲುಸಂಕಗಳ ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಸೂಚಿಸಿದರು.

    ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿಗಳನ್ನು ಸ್ವಂತ ಕಟ್ಟಡಗಳಿಗೆ ಸ್ಥಳಾಂತರಿಸಲು ಅನುಕೂಲವಾಗುವಂತೆ ಶೀಘ್ರದಲ್ಲಿ ಹೊಸ ಕಟ್ಟಡಗಳನ್ನು ನಿರ್ಮಿಸಲು ಸೂಕ್ತ ಜಾಗ ಗುರುತಿಸಿ ನಿರ್ಮಾಣ ಕಾರ್ಯ ಕೈಗೊಳ್ಳುವಂತೆ , ಗಂಟುರೋಗದಿಂದ ಮೃತಪಟ್ಟ ಜಾನುವಾರುಗಳಿಗೆ ಶೀಘ್ರದಲ್ಲಿ ಪರಿಹಾರ ವಿತರಿಸುವಂತೆ ಹಾಗೂ ಮಳೆಗಾಲದಲ್ಲಿ ರೈತರಿಗೆ ಭಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆಯದಂತೆ ಎಚ್ಚರವಹಿಸುವಂತೆ ಮತ್ತು ಜಿಲ್ಲೆಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು. ಉಡುಪಿ ಜಿಲ್ಲೆಯ ಉಸ್ತುವಾರಿಯನ್ನು ನಾನು ಸಂತೋಷದಿಂದ ಸ್ವೀಕರಿಸಿದ್ದು, ಜಿಲ್ಲೆಯ ಸರ್ವತೋಮುಖ ಅಭಿವೃಧ್ದಿಗೆ ಎಲ್ಲಾ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು , ಸಮನ್ವಯದಿಂದ ಜನಪರ ಕಾಳಜಿಯಿಂದ ಕಾರ್ಯ ನಿರ್ವಹಿಸಬೇಕು ಎಂದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *