Connect with us

    KARNATAKA

    ಸಚಿವ ಉಮೇಶ್‌ ಕತ್ತಿ ಹೃದಯಾಘಾತದಿಂದ ನಿಧನ

    ಬೆಂಗಳೂರು, ಸೆಪ್ಟೆಂಬರ್ 07: ರಾಜ್ಯದ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ವಿ. ಕತ್ತಿ (62) ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು.

    ರಾತ್ರಿ ಶೌಚಾಲಯಕ್ಕೆ ತೆರಳಿದ್ದ ಅವರು ಅಲ್ಲಿಯೇ ಕುಸಿದುಬಿದ್ದಿದ್ದರು. ಹತ್ತು ನಿಮಿಷಗಳಾದರೂ ಹೊರ ಬರದಿದ್ದಾಗ ಕುಟುಂಬದವರು ಬಾಗಿಲು ತೆರೆದು ಒಳ ಹೋದಾಗ ಅಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿತ್ತು. ಬಳಿಕ ಅವರನ್ನು ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರನಿಗಾ ಘಟಕದಲ್ಲಿ ಇರಿಸಲಾಗಿತ್ತು. ತಡರಾತ್ರಿ ವೇಳೆಗೆ ಉಮೇಶ ಕತ್ತಿ ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

    ಉಮೇಶ್‌ ಕತ್ತಿ ಅವರಿಗೆ ಪತ್ನಿ ಶೀಲಾ, ಮಗ ನಿಖಿಲ್‌, ಮಗಳು ಸ್ನೇಹಾ ಇದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ 1961ರ ಮಾರ್ಚ್‌ 14ರಂದು ಜನಿಸಿದ್ದ ಉಮೇಶ್ ಕತ್ತಿ ಅವರು ಬಿ.ಎ. ಪದವಿ ಪಡೆದಿದ್ದರು. ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ 1985ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಆರು ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

    ಮೂಲತಃ ಜನತಾ ಪರಿವಾರದವರಾದ ಕತ್ತಿ ಅವರು ನಂತರ ಬಿಜೆಪಿ ಸೇರಿದ್ದರು. 1996ರಿಂದ 1999ರವರೆಗೆ ಸಕ್ಕರೆ ಸಚಿವರಾಗಿ, 2008ರಿಂದ ಕೃಷಿ ಸಚಿವರಾಗಿ ಮತ್ತು 2010ರಿಂದ 2013ರವರೆಗೆ ಕೃಷಿ ಸಚಿವರಾಗಿದ್ದರು. 2021ರ ಆಗಸ್ಟ್‌ನಿಂದ ಅವರು ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

    ಉಮೇಶ ಕತ್ತಿ ಅವರು ಬೆಳಗಾವಿಯ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯ ಮಾಲೀಕರೂ ಆಗಿದ್ದರು. ಕತ್ತಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೋಕ ವ್ಯಕ್ತಪಡಿಸಿದ್ದಾರೆ.

    ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ

    Share Information
    Advertisement
    Click to comment

    Leave a Reply

    Your email address will not be published. Required fields are marked *