Connect with us

KARNATAKA

ಬಿಜೆಪಿ ಹಿರಿಯ ಮುಖಂಡ ಹಾನಗಲ್ ಶಾಸಕ ಸಿಎಂ ಉದಾಸಿ ಇನ್ನಿಲ್ಲ..

ಬೆಂಗಳೂರು ಜೂನ್ 8: ಬಿಜೆಪಿ ಹಿರಿಯ ಮುಖಂಡ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಸಿಎಂ ಉದಾಸಿ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಕಳೆದ ನಾಲ್ಕೈದು ದಿನಗಳ ಹಿಂದೆಯೇ ಸಿ.ಎಂ.ಉದಾಸಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

1983 ರಲ್ಲಿ ಮೊದಲ ಬಾರಿಗೆ ವಿಧಾನಸಭೆಯನ್ನು ಪಕ್ಷೇತರರಾಗಿ ಪ್ರವೇಶಿಸಿದ್ದ ಉದಾಸಿ, 1985 ರಲ್ಲಿ ಜನತಾಪಕ್ಷದಿಂದ ಗೆಲುವು ಸಾಧಿಸಿದ್ದರು. 1994 ರಲ್ಲಿ ಜನತಾದಳದಿಂದ ಆಯ್ಕೆಯಾಗಿದ್ದರು. ದಳ ಇಬ್ಭಾಗ ಆದ ನಂತರ ಅವರು ಬಿಜೆಪಿ ಸೇರಿದ್ದರು. 2004, 2008 ಮತ್ತು 2018 ರಲ್ಲಿ ಬಿಜೆಪಿಯಿಂದ ಗೆದ್ದಿದ್ದರು. 2013 ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಯಡಿಯೂರಪ್ಪ ಅವರ ಮಂತ್ರಿ ಮಂಡಲದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಸಾರಿಗೆ, ಲೋಕೋಪಯೋಗಿ ಖಾತೆಯನ್ನು ನಿರ್ವಹಿಸಿದ್ದರು.

ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿ.ಎಂ.ಉದಾಸಿಯವರು ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಆ ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು. ಅವರ ನಿಧನದಿಂದ ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಭಗವಂತ ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *