DAKSHINA KANNADA
ವಿಧಾನ ಪರಿಷತ್ ಉಪಚುನಾವಣೆ : ಅಭ್ಯರ್ಥಿಯ ಗೆಲುವಿಗೆ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ರಣತಂತ್ರ..!
ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಉಪಚುನಾವಣೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಭಾನುವಾರ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಪ್ರಮುಖರ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಕಳ ಶಾಸಕರಾದ ಸುನಿಲ್ ಕುಮಾರ್, ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಅವರ ಗೆಲುವಿಗೆ ಗ್ರಾಮ ಮಟ್ಟದಲ್ಲಿ ಚಟುವಟಿಕೆಗಳನ್ನು ನಡೆಸುವ ದೃಷ್ಟಿಯಿಂದ ಬಿಜೆಪಿಯ ಎಲ್ಲಾ ನಾಯಕರು ಕಾರ್ಯೋನ್ಮುಖರಾಗಬೇಕು. ಚುನಾವಣೆ ಸಮೀಪದಲ್ಲೇ ಇರುವಾಗ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಹೇಳಿದರು.
ಉಡುಪಿ ಸಂಸತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ಮಾತನಾಡಿ, ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಈ ಬಾರಿಯೂ ಬಿಜೆಪಿ ಗೆಲುವು ಸಾಧಿಸುತ್ತದೆ. ಕಿಶೋರ್ ಕುಮಾರ್ ಅವರು ನಿಮ್ಮೆಲ್ಲರ ಪ್ರತಿನಿಧಿಯಾಗಿ ನಮ್ಮ ಜಿಲ್ಲೆಯನ್ನು ಪ್ರತಿನಿಧಿಸುತ್ತಾರೆ. ಅವರ ಗೆಲುವಿನ ದೃಷ್ಟಿಯಿಂದ ಚುನಾವಣೆಯ ವರೆಗೂ ಅವಿರತವಾಗಿ ಶ್ರಮಿಸೋಣ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು ಹಾಗೂ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ, ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಶಾಸಕರಾದ ರಾಜೇಶ್ ನಾಯ್ಕ್, ಡಾ. ಭರತ್ ಶೆಟ್ಟಿ ವೈ, ವೇದವ್ಯಾಸ್ ಕಾಮತ್, ಭಾಗಿರಥಿ ಮುರುಳ್ಯ, ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಡಾ. ಧನಂಜಯ್ ಸರ್ಜಿ, ಚುನಾವಣಾ ಸಂಚಾಲಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಪ್ರೇಮಾನಂದ ಶೆಟ್ಟಿ, ಮಾಜಿ ಶಾಸಕರುಗಳು, ಜಿಲ್ಲೆಯ ಪ್ರಮುಖರು, ಚುನಾವಣಾ ಕಾರ್ಯ ನಿರ್ವಹಣಾ ತಂಡದ ಪ್ರಮುಖರು ಉಪಸ್ಥಿತರಿದ್ದರು.