LATEST NEWS
ವೆನ್ಲಾಕ್ ಆಸ್ಪತ್ರೆಯ 50 ಹಾಸಿಗೆಗಳ ಐಸಿಯು ಕಟ್ಟಡ ಸೇರಿ 25.11 ಕೋಟಿ ರೂ ಕಾಮಗಾರಿಗಳಿಗೆ ಪ್ರಧಾನಿ ಮೋದಿ ನಾಳೆ ಶಂಕುಸ್ಥಾಪನೆ
ಮಂಗಳೂರು ಅಕ್ಟೋಬರ್ 28: ಕೇಂದ್ರ ಸರ್ಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಅ.29ರಂದು) ನೆರವೇರಿಸಲಿದ್ದಾರೆ.
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್ (PMABHIM) ಯೋಜನೆಯಡಿ ಮಂಜೂರಾದ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ವೆನ್ಲಾಕ್ ಆಸ್ಪತೆಯ ನೂತನ ಶಸ್ತ್ರಚಿಕಿತ್ಸಾ ವಿಭಾಗದ ಮುಂಭಾಗದಲ್ಲಿರುವ ಅತ್ತಾವರದ ಐ.ಎಂ.ಎ ಭವನದಲ್ಲಿ ನಾಳೆ ಬೆಳಗ್ಗೆ 11.30ಕ್ಕೆ ಆಯೋಜಿಸಲಾಗಿದೆ. ಮಧ್ಯಾಹ್ನ 01:10ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅವರು ಈ ಬಹುಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಮಂಗಳೂರಿನಲ್ಲಿ ನಡೆಯುವ ಈ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ಭರತ್ ವೈ ಶೆಟ್ಟಿ, ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಸೇರಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳು ಮುಂತಾದವರು ಭಾಗವಹಿಸಲಿದ್ದಾರೆ ಎಂದು ಸಂಸದರ ಕಾರ್ಯಾಲಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.