LATEST NEWS
ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂಸದ ನಳಿನ್ ಕುಮಾರ್ ಕಟೀಲ್
ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂಸದ ನಳಿನ್ ಕುಮಾರ್ ಕಟೀಲ್
ಮಂಗಳೂರು ಮಾರ್ಚ್ 24: ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಹೆಚ್ಚುತ್ತಿರುವ ಆತಂಕದ ನಡುವೆಯೂ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮಂಗಳೂರಿನಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆ ವೆನಲಾಕ್ ಬಗ್ಗೆ ಅಪಪ್ರಚಾರ ನಡೆಸಿರುವ ಹಿನ್ನಲೆ ಇಂದು ಸಂಸದ ನಳಿನ್ ಕುಮಾರ್ ಕಟೀಲ್ ತುರ್ತು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಆಸ್ಪತ್ರೆಯ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಕರೋನಾ ಮುಂಜಾಗೃತ ಬಗ್ಗೆ ಸಮಾಲೋಚನೆ ನಡೆಸಿದರು.
ನಿನ್ನೆ ವೆನ್ಲಾಕ್ ಆಸ್ಪತ್ರೆ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಕರೋನಾ ಸೊಂಕಿತರಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಆಡಿಯೋ ಒಂದು ವೈರಲ್ ಆಗಿತ್ತು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಧಿವೇಶನದ ನಿಮಿತ್ತ ದೆಹಲಿಯಲ್ಲಿ ಇದ್ದರು. ತಮ್ಮ ಲೋಕಸಭಾ ಕ್ಷೇತ್ರದಲ್ಲಿರುವ ಜನರು ವೆನಲಾಕ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರನ್ನು ಸರಿಯಾಗಿ ನೋಡಿಕೊಳ್ಳಲಾಗುತ್ತಿಲ್ಲ ಎನ್ನುವ ಊಹಾಪೋಹದ ಬಗ್ಗೆ ಗೊಂದಲ ಪಡುತ್ತಿರುವುದನ್ನು ಅರಿತುಕೊಂಡ ಸಂಸದರು ತಕ್ಷಣ ದೆಹಲಿಯಿಂದ ಬೆಂಗಳೂರಿಗೆ ಬಂದು ಅಲ್ಲಿಂದ ತಡಮಾಡದೇ ರಸ್ತೆ ಮಾರ್ಗವಾಗಿ ಮಂಗಳೂರಿಗೆ ಆಗಮಿಸಿದರು.
ಇಂದು ಮಂಗಳೂರಿಗೆ ತಲುಪಿದ ಕೂಡಲೇ ನೇರವಾಗಿ ವೆನಲಾಕ್ ಆಸ್ಪತ್ರೆಗೆ ತೆರಳಿದ ನಳಿನ್ ಕುಮಾರ್ ಕಟೀಲ್ ಅವರು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಆಸ್ಪತ್ರೆಯ ಅಧೀಕ್ಷಕಿ ಸಹಿತ ವಿವಿಧ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಾಲೋಚನೆ ನಡೆಸಿದರು.
ಈ ಸಂದರ್ಭ ಸಂಸದರಿಗೆ ಸೂಕ್ತ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಕರೋನಾ ಚಿಕಿತ್ಸೆಗಾಗಿ ಪ್ರತ್ಯೇಕ ಬ್ಲಾಕ್ ವ್ಯವಸ್ಥೆ ಮಾಡಿರುವುದನ್ನು ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದರು. ಒಬ್ಬ ವ್ಯಕ್ತಿಯಲ್ಲಿ ಮಾತ್ರ ಕರೋನಾ ಪಾಸಿಟಿವ್ ಪತ್ತೆಯಾಗಿದ್ದು ಮತ್ತು ಇನ್ನೊಬ್ಬ ಕೊರೊನಾ ಶಂಕಿತ ವ್ಯಕ್ತಿಯನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ. ಸುಮಾರು 200 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡುವ ವ್ಯವಸ್ಥೆ ಇದೆ. ಆದ್ದರಿಂದ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಮಾಹಿತಿ ನೀಡಿದರು.
ಜನರು ಊಹಾಪೋಹಗಳನ್ನು ನಂಬದಂತೆ, ಜಿಲ್ಲಾಡಳಿತ, ರಾಜ್ಯ, ರಾಷ್ಟ್ರ ಸಂಪೂರ್ಣವಾಗಿ ಜನರ ಆರೋಗ್ಯ ಕಾಳಜಿಗೆ ಕಟಿಬದ್ಧವಾಗಿದೆ ಎಂದು ನಳಿನ್ ಕುಮಾರ್ ಜನರಿಗೆ ತಿಳಿಸಿದ್ದಾರೆ. ಸಂಸದರ ವೆನಲಾಕ್ ಭೇಟಿಯಿಂದ ಜನರಲ್ಲಿ ಮೂಡಿದ್ದ ಗೊಂದಲಕ್ಕೆ ತೆರೆ ಬಿದ್ದಂತೆ ಆಗಿದೆ.