ಬೆಂಗಳೂರು, ಮಾರ್ಚ್ 23: ಮಹಿಳೆಯರ ಮೇಲೆ ಮೂಡುಬಿದಿರೆ ಪೊಲೀಸ್ ಇನ್ ಸ್ಪೆಕ್ಟರ್ ಸಂದೇಶ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದ್ದಾರೆ.

ಸಂತ್ರಸ್ತೆಯರ ಅಹವಾಲು ಆಲಿಸಿದ ಗೃಹ ಸಚಿವರು, ಪ್ರಕರಣದ ಸತ್ಯಾಸತ್ಯತೆ ಹೊರಬರಲು ಉನ್ನತ ಮಟ್ಟದ ತನಿಖೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. “ಮೂಡುಬಿದಿರೆ ಘಟನೆಯ ಕುರಿತು ಸಂತ್ರಸ್ತೆಯರು ನೀಡಿದ ಮಾಹಿತಿ ಆಧಾರದ ಮೇಲೆ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲು ಡಿಜಿ-ಐಜಿಪಿ ಅವರಿಗೆ ಸೂಚನೆ ನೀಡಿದ್ದೇನೆ.

ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಮೇಲೆ ಆರೋಪ ಬಂದ ಬಳಿಕ ಅವರನ್ನು ಅಮಾನತು ಮಾಡುವ ಮೂಲಕ ತಕ್ಷಣದ ಕ್ರಮ ಕೈಗೊಳ್ಳಲಾಗಿದೆ. ವರದಿ ನೀಡುವಂತೆ ಸೂಚಿಸಲಾಗಿದ್ದು, ಕೊಡುತ್ತಾರೆ. ಇನ್ನೂ ಅನೇಕ ವಿಚಾರಗಳನ್ನು ಕೇಳಿದ ಮೇಲೆ ಹೆಚ್ಚಿನ ತನಿಖೆ ಮಾಡಬೇಕೆಂದು ಸಿಐಡಿ ತನಿಖೆಗೆ ವಹಿಸಲಾಗಿದೆ. ತನಿಖೆ ಬಳಿಕ ಸತ್ಯಾಂಶ ಹೊರಬರುತ್ತದೆ. ಇನ್ನು ಎಷ್ಟು ಜನ ಸಂತ್ರಸ್ತರಿದ್ದಾರೆ ಎಂಬುದು ತನಿಖೆ ವೇಳೆ ಗೊತ್ತಾಗಲಿದೆ. ಇದಕ್ಕಾಗಿಯೇ ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹಸಚಿವರು ಹೇಳಿದರು.
ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವ ಉದ್ದೇಶದಿಂದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ನೇರವಾಗಿ ಗೃಹ ಸಚಿವರ ಬಳಿ ಸಂತ್ರಸ್ತೆಯರನ್ನು ಕರೆದೊಯ್ದಿದ್ದರು. “ಸಂತ್ರಸ್ತೆಯರು ನೀಡಿದ ಸಾಕ್ಷ್ಯಗಳು ತನಿಖೆಗೆ ಪೂರಕವಾಗಿವೆ. ಪೊಲೀಸ್ ಇಲಾಖೆಯ ಮೇಲಿನ ನಂಬಿಕೆ ಉಳಿಸಿಕೊಳ್ಳಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ,” ಎಂದು ನಾಗಲಕ್ಷ್ಮಿ ಚೌಧರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.