KARNATAKA
ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಅವಹೇಳನ ಆರೋಪ – ಮೈಸೂರಿನ ಉದಯಗಿರಿಯಲ್ಲಿ ಕಲ್ಲುತೂರಾಟ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact-1.jpg?fit=728%2C90&ssl=1)
ಮೈಸೂರು ಫೆಬ್ರವರಿ 11: ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಮುಸ್ಲಿಂ ಸಮುದಾಯದ ಯುವಕರು ಸೋಮವಾರ ರಾತ್ರಿ ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಮುಂಭಾಗ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸುರೇಶ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟದ್ದ, ಯಾವಾಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತೋ ಉದಯಗಿರಿ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಆ ಪೋಸ್ಟ್ ಒಂದು ಸಮುದಾಯದ ಯುವಕರನ್ನು ರೊಚ್ಚಿಗೆಬ್ಬಿಸಿತ್ತು. ತಕ್ಷಣ ಅವರು ಉದಯಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸರು, ಕೆಲ ಧಾರ್ಮಿಕ ಮುಖಂಡರು ಹಾಗೂ ರಾಜಕೀಯ ಮುಖಂಡರು ಅಲ್ಲಿದ್ದ ಯುವಕರಿಗೆ ಶಾಂತಿ ಕಾಪಾಡುವಂತೆ ಮನವರಿಕೆ ಮಾಡಲು ಪ್ರಯತ್ನಿಸಿದರು. ಆದರೆ ಅಲ್ಲಿದ್ದ ಗುಂಪು ಇದನ್ನು ಕೇಳಲು ಸಿದ್ಧರಿರಲಿಲ್ಲ. ಏಕಾಏಕಿ ಘೋಷಣೆ ಕೂಗುತ್ತಾ ಪೊಲೀಸರು ಹಾಗೂ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದರು.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದಾಗ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಲಾಠಿ ಪ್ರಹಾರ ಮಾಡಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದರು. ಈ ವೇಳೆ ಕೆಎಸ್‌ಆರ್ ಪಿ ಹಾಗೂ ಸಿಎಆರ್ ಪೊಲೀಸರಿಗೆ ಗಾಯಗಳಾಗಿದ್ದು, ಪೊಲೀಸ್ ವಾಹನದ ಗಾಜುಗಳು ಒಡೆದಿವೆ. ಕಲ್ಲು ಬಿಸಾಡಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಗಳವಾರ ಠಾಣೆಯ ಸುತ್ತ ಪೊಲೀಸ್ ನಿಯೋಜಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.