ಹೊಸ ರೇಶನ್ ಕಾರ್ಡ್, ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ
ಉಡುಪಿ ಜುಲೈ 11 :-ರಾಜ್ಯ ಸರಕಾರವು ಹೊಸ ರೇಶನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಹಾಗೂ ಈಗಿನ ರೇಶನ್ ಕಾರ್ಡ್ಗೆ ಹೆಸರು ಸೇರಿಸಲು ಮತ್ತು ತಿದ್ದುಪಡಿಗೆ ಅವಕಾಶ ನೀಡಿದೆ.
ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅವರ ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಈ ವಿಷಯ ತಿಳಿಸಿದರು.
ಚುನಾವಣೆ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿತ್ತು. ಇದೀಗ ಈ ಪ್ರಕ್ರಿಯೆಯನ್ನು ಮುಂದುವರಿಸಲು ರಾಜ್ಯ ಸರಕಾರ ಸೂಚನೆ ನೀಡಿದೆ. ಗ್ರಾಮೀಣ ಪ್ರದೇಶದ ನಾಗರೀಕರು ಆಯಾ ಗ್ರಾಮ ಪಂಚಾಯತ್ ಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಇದಕ್ಕಾಗಿ ಗುರುತಿಸಿರುವ ಕೇಂದ್ರಗಳಲ್ಲಿ ಹೊಸ ರೇಶನ್ ಕಾರ್ಡ್ ಗೆ ಅರ್ಜಿ ಅಥವಾ ಹೆಸರು ಸೇರ್ಪಡೆ, ತಿದ್ದುಪಡಿಗೆ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕರು ಸಭೆಗೆ ತಿಳಿಸಿದರು.
ರಾಷ್ಟ್ರೀಯ ಉದ್ಯೋಗ ಖಾತ್ರಿ(ನರೇಗಾ) ಯೋಜನೆಯಡಿ ಸಾಕಷ್ಟು ಉದ್ಯೋಗಾವಕಾಶಗಳು ಲಭ್ಯವಿದ್ದರೂ, ಉಡುಪಿ ಜಿಲ್ಲೆಯಲ್ಲಿ ಕೆಲಸ ಮಾಡಲು ಜನರು ಮುಂದೆ ಬರುತ್ತಿಲ್ಲ. ಕೆಲವು ಗ್ರಾಮ ಪಂಚಾಯತಿಗಳು, ನರೇಗಾ ಯೋಜನೆಯಲ್ಲಿ ತಮ್ಮ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೆಲಸ ಮಾಡಲು ಜನರು ಲಭ್ಯವಿಲ್ಲ ಎಂದು ಲಿಖಿತವಾಗಿಯೇ ತಿಳಿಸಿದ್ದಾರೆ. ಕೃಷಿ, ತೋಟಗಾರಿಕೆ ಕ್ಷೇತ್ರಗಳ್ಲೂ ನರೇಗಾ ಅಡಿ ಕೆಲಸ ಮಾಡಲು ಅವಕಾಶ ಇರುವುದರಿಂದ ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
108 ಅಂಬ್ಯುಲೆನ್ಸ್ ಳಲ್ಲಿ ನರ್ಸ್ ಸೇರಿದಂತೆ ಅಗತ್ಯ ಸಿಬ್ಬಂದಿಗಳ ಕೊರತೆ ಕಂಡುಬರುತ್ತಿದೆ. ತುರ್ತು ಸಂದರ್ಭಗಳಲ್ಲಿ ಅಂಬ್ಯುಲೆನ್ಸ್ ಗಳಲ್ಲಿ ಇವರ ಸೇವೆ ಅಗತ್ಯವಿದೆ. ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲು ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ಆರೋಗ್ಯ ಇಲಾಖೆಗೆ ಸೂಚಿಸಿದರು.
ಸರಕಾರಿ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಳಕೆ ಇಲ್ಲ : ಉಡುಪಿ ಜಿಲ್ಲೆಯಲ್ಲಿ ನಡೆಯುವ ಸರಕಾರಿ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿ, ಹೂವಿನ ಬೊಕ್ಕೆ, ಲೋಟೆ ಮತ್ತಿತರ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಈಗಾಗಲೇ ಎಲ್ಲಾ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧಿಕಾರಿಗಳಿಗೆ ಸೂಚಿಸಿದರು.