ಹಾವೇರಿ,ಮಾರ್ಚ್ 01: ಮದುವೆಯಾದ 15 ದಿನಕ್ಕೆ ನವದಂಪತಿ ರಸ್ತೆ ಅಪಘಾತವೊಂದರಲ್ಲಿ ಸ್ಥಳದಲ್ಲೇ ಸಾವನ್ನಪ್ಪಿ,ಇಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ಇರೋ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.

ಹಾವೇರಿ ನಗರದ ನಿವಾಸಿಗಳಾದ ಕಾರ್ತಿಕ್ ಹೂಗಾರ (34), ಪತ್ನಿ ಐಶ್ವರ್ಯ (30) ಸ್ಥಳದಲ್ಲೇ ಸಾವನ್ನಪ್ಪಿದ ದಂಪತಿಗಳಾಗಿದ್ದಾರೆ.
ಶನಿವಾರ ದೇವರ ದರ್ಶನಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ದಂಪತಿಗಳ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಇವರ ಮದುವೆಯಾಗಿ ಕೇವಲ 15 ದಿನಗಳು ಆಗಿತ್ತು ಅಷ್ಟೇ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಕಾರ್ಯಚರಣೆ ನಡೆಸಿ ಕಾರಿನಿಂದ ಮೃತದೇಹ ಹೊರಕ್ಕೆ ತೆಗೆದಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇತ್ತ ಎರಡೂ ಜೀವಗಳನ್ನು ಕಳೆದುಕೊಂಡ ಕುಟುಂಬಗಳಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಈ ಬಗ್ಗೆ ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



