LATEST NEWS
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಮುಂಬೈನಲ್ಲಿ ಮತ್ತೊಬ್ಬ ಆರೋಪಿ ಅರೆಸ್ಟ್ ಮಾಡಿದ ಎನ್ಐಎ
ಮಂಗಳೂರು ಜೂನ್ 05: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ರಿಯಾಜ್ ಯೂಸಫ್ ಹಾರಳ್ಳಿ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿ ವಿದೇಶಕ್ಕೆ ಪರಾರಿಯಾಗಲು ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವೇಳೆ ಎನ್ಐಎ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಈ ಮೂಲಕ ಬಂಧಿತ ಆರೋಪಿಗಳು ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆಯಷ್ಟೇ ಸಕಲೇಶಪುರದಲ್ಲಿ ಮುಸ್ತಾಫಾ ಪೈಚಾರ್ನನ್ನು ಬಂಧಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ನ ನಾಲ್ಕನೇ ಆರೋಪಿ ಮುಸ್ತಾಫ ಪೈಚಾರ್ ನನ್ನು ಕಳೆದ ಮೇ 10 ರಂದು ಹಾಸನ ಜಿಲ್ಲೆಯ ಸಕಲೇಶಪುರದ ಆನೆಮಹಲ್ ಬಳಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದರು. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ನಂತರ ಗಾಯಗೊಂಡಿದ್ದ ಪ್ರವೀಣ್ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದಾದ ಬಳಿಕ ದುಷ್ಕರ್ಮಿಗಳು ವಿವಿಧ ಕಡೆಗಳಿಗೆ ಪರಾರಿಯಾಗಿದ್ದರು. ಈ ಹಿನ್ನಲೆ ಎನ್ಐಎ ಅಧಿಕಾರಿಗಳು ತನಿಖೆ ಶುರು ಮಾಡಿದ್ದು, ಇದೀಗ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.